ಕರ್ನಾಟಕ

ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ…ಬಿಗಿ ಭದ್ರತೆ

Pinterest LinkedIn Tumblr

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅರಮನೆ ಮೈದಾನದಲ್ಲಿ ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದ 90 ದಿನಗಳ ಪರಿವರ್ತನಾ ಯಾತ್ರೆ ಅಂತ್ಯಗೊಂಡಿದ್ದು, ಪ್ರಧಾನಿ ಮೋದಿ ಅವರು ನಾಳೆ ನಡೆಯಲಿರುವ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ನಾಳೆ ಮಧ್ಯಾಹ್ನ ನಗರಕ್ಕೆ ಆಗಮಿಸುತ್ತಿದ್ದು, ಸಂಜೆ ಅರಮನೆ ಮೈದಾನದಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಜನವರಿ 28ರಂದೇ ಬೆಂಗಳೂರಿಗೆ ಆಗಮಿಸಬೇಕಾಗಿತ್ತು. ಆದರೆ ಕೇಂದ್ರ ಬಜೆಟ್ ಹಾಗೂ ಇತರೆ ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅದನ್ನು ಫೆ.4ಕ್ಕೆ ಮುಂದೂಡಲಾಗಿತ್ತು.

ಬಿಗಿ ಭದ್ರತೆ
ಬಿಜೆಪಿ ರ್ಯಾಲಿ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲಾ ಕಡೆ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಸುಮಾರು 8 ಗೇಟ್ ಗಳ ಮೂಲಕ ಜನರನ್ನು ಒಳಬಿಡುವ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಭದ್ರತೆಗೆ ಮೂರು ಡಿಸಿಪಿ, 33 ಎಸ್ಪಿ, 250 ಸಬ್ ಇನ್ಸ್ ಪೆಕ್ಟರ್, ಮೂರು ಸಾವಿರ ಪೊಲೀಸರು, 50 ಕೆಎಸ್ ಆರ್ ಪಿ ತುಕಡಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ಅಲ್ಲದೆ ಯಾವುದೇ ಪ್ರತಿಭಟನಾಕಾರರನ್ನು ಒಳಬಿಡುವುದಿಲ್ಲ ಎಂದು ಹೇಳಿದ್ದಾರೆ.

Comments are closed.