ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್-ಟ್ಯಾಂಕರ್ ಮುಖಾಮುಖಿ ಢಿಕ್ಕಿಯಾದ್ದರಿಂದ ಸ್ಥಳದಲ್ಲೇ ನಾಲ್ಕು ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಕೊಪ್ಪಳದ ಕುಕನೂರಿನ ಬನ್ನಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ -63 ರಲ್ಲಿ ಟ್ರ್ಯಾಕ್ಟರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಿಂದಾಗಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂತೆಯೇ 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಮೃತರನ್ನು ಈರಪ್ಪ ಹಡಪದ (35), ಈರಮ್ಮ ಹಡಪದ (55), ಬಿಬಿಜಾನ್ ಕವಲೂರು (40) ಮಹಮದ್ ರಫಿ (19) ಎಂದು ಗುರುತಿಸಲಾಗಿದ್ದು. ಮೃತರೆಲ್ಲರೂ ಕೊಪ್ಪಳದ ಬನ್ನಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಟ್ಯಾಂಕರ್ ಚಾಲಕನ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗುತ್ತಿದ್ದು, ಪ್ರಸ್ತುತ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮುಂಜಾನೆ ಚಾಲಕ ನಿದ್ದೆಯಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದ್ದು. ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.