ಕರ್ನಾಟಕ

ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್-ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ : ಸಿಎಂ ಕುಮಾರಸ್ವಾಮಿ

Pinterest LinkedIn Tumblr

ನವದೆಹಲಿ: ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ ಅವರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ರಚನೆ ವಿಚಾರದಲ್ಲಿ ಯಾವುದೇ ಸಮಸ್ಯೆ ಅಥವಾ ಗೊಂದಲಗಳು ಇಲ್ಲ. ಸಂಪುಟಕ್ಕೆ ಸೇರ್ಪಡೆಯಾಗುವವರ ಹೆಸರುಗಳನ್ನು ಸೋಮವಾರ ಸಂಜೆ ಅಥವಾ ಮಂಗಳವಾರ ಅಂತಿಮಗೊಳಿಸಲಾಗುವುದು ಎಂದರು,

ಖಾತೆ ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಸಮಸ್ಯೆಯಿಲ್ಲ. ಹಣಕಾಸು ಇಲಾಖೆ ಯಾರ ಕೈಲಿರಬೇಕು ಎಂಬುದರ ಬಗ್ಗೆಯೂ ನಾವು ಚರ್ಚಿಸಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

ಹೆಸರುಗಳು ಅಂತಿಮಗೊಂಡ ಬಳಿಕ ರಾಹುಲ್ ಗಾಂಧಿ ಅವರ ಜೊತೆಗೆ ಚರ್ಚಿಸುತ್ತೇನೆ. ನಂತರವೇ ಸಂಪುಟದಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬ ಪಟ್ಟಿಯನ್ನು ಪ್ರಕಟಿಸಲಾಗುವುದು. ಮೈತ್ರಿ ಸರ್ಕಾರದ ಎರಡೂ ಪಾಲುದಾರ ಪಕ್ಷಗಳು ಔದಾರ್ಯ ತೋರುವ ಮೂಲಕ ಖಾತೆ ಹಂಚಿಕೊಳ್ಳಬೇಕಿದೆ. ರಾಜಕಾರಣದಲ್ಲಿ ಯಾರೂ ಶಾಶ್ವತ ವೈರಿಗಳಲ್ಲ. ಈ ಮಾತು ಎಲ್ಲರಿಗೂ ಅರ್ಥವಾಗಿದೆ. ಮೈತ್ರಿ ಸರ್ಕಾರ ಕುರಿತಂತೆ ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Comments are closed.