ಕರ್ನಾಟಕ

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ – ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ನೇಮಕ

Pinterest LinkedIn Tumblr

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ದಿನೇಶ್ ಗುಂಡೂರಾವ್ ಈ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು.

ಈ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿ ಮತ್ತು ಕೆಲವು ಖಾತೆಗಳ ಹೊಣೆ ಹೊತ್ತಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ವಹಿಸುವ ಮಾತುಗಳು ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಕೇಳಿಬರುತ್ತಿತ್ತು. 2010ರಿಂದ ಇಲ್ಲಿಯವರೆಗೆ ಡಾ ಜಿ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ದಿನೇಶ್ ಗುಂಡೂರಾವ್ ಅವರ ಜೊತೆಗೆ ಸಾಕಷ್ಟು ನಾಯಕರ ಹೆಸರುಗಳು ಕೇಳಿಬರುತ್ತಿದ್ದವು. ಹಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು.

ಅಧ್ಯಕ್ಷರ ನೇಮಕ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಜಾತಿವಾರು, ಪ್ರದೇಶವಾರು, ರಾಜ್ಯದಲ್ಲಿ ನಾಯಕರ ಪ್ರಭಾವ ಇತ್ಯಾದಿಯನ್ನು ಪರಿಗಣಿಸಿ ಆಯ್ಕೆ ಮಾಡಿದೆ.

ಇನ್ನು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಕಾರಣ ನೀಡಿ ಹಿರಿಯ ನಾಯಕ ಎಸ್‌.ಆರ್‌. ಪಾಟೀಲ್‌ ಅವರ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಈಶ್ವರ್‌ ಖಂಡ್ರೆ ಅವರಿಗೆ ವಹಿಸಲಾಗಿದೆ.

ಕರ್ನಾಟಕ ರಾಜ್ಯದ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಸಮಿತಿಯಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಈಶ್ವರ ಖಂಡ್ರೆ ಅವರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ದೊರಕಿದೆ ಎನ್ನಲಾಗಿದೆ.

Comments are closed.