ಕರ್ನಾಟಕ

ರಾಮನಗರ ಉಪಚುನಾವಣೆ; ಜೆಡಿಎಸ್​ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಖಚಿತ

Pinterest LinkedIn Tumblr


ರಾಮನಗರ: ರಾಮನಗರ ಕ್ಷೇತ್ರದ ಉಪಚುನಾವಣೆಗೆ ರಾಮನಗರದ ಅಭ್ಯರ್ಥಿ ಯಾರಾಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಕಾಡಿದೆ. ಈಗಾಗಲೇ ಜೆಡಿಎಸ್​ ಪಕ್ಷ ರಾಮನಗರ ಉಪಚುನಾವಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಬಿಡದಿಯ ಕೇತಗಾನಹಳ್ಳಿಯಲ್ಲಿ ಜೆಡಿಎಸ್​ ಕಾರ್ಯಕರ್ತರ ಸಭೆ ಕರೆದಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಸಿಎಂ ಒಡೆತನದ ತೋಟದ ಮನೆಯಲ್ಲಿ ಸಭೆ ನಡೆಯಲಿದೆ. ಕಾರ್ಯಕರ್ತರ ಜೊತೆ ಸಭೆ ನಡೆಸಿ ನಂತರ ಜೆಡಿಎಸ್​ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು ,ಈ ಸಭೆಯಲ್ಲಿ ಅನಿತಾ ಕುಮಾರಸ್ವಾಮಿಯವರೂ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಇನ್ನೂ ಅನಿತಾ ಕುಮಾರಸ್ವಾಮಿಯವರೇ ರಾಮನಗರದ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅವರನ್ನೇ ಆಯ್ಕೆ ಮಾಡುವುದು ಖಚಿತವಾಗಿದ್ದು, ನಾಳೆ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿ ಉಳಿದಿದೆ. ಹೀಗಾಗಿ ನಾಳೆ ನಡೆಯುವ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ರಾಮನಗರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗೆ ನಾಳೆ ಸ್ಪಷ್ಟವಾಗಿ ಉತ್ತರ ಸಿಗಲಿದೆ.

ಸಿಎಂ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ಮೇಲೆ ಅನಿತಾ ಕುಮಾರಸ್ವಾಮಿ ರಾಮನಗರ ಕ್ಷೇತ್ರಕ್ಕೆ ಹೆಚ್ಚಾಗಿ ಆಗಮಿಸಿದ್ದರು. ಸಭೆ- ಸಮಾರಂಭಗಳು, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯಕರ್ತರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಕಳೆದ ಮೂರು ತಿಂಗಳಿಂದ ಕಾರ್ಯಕರ್ತರ ಜೊತೆ ಉತ್ತಮ ಒಡನಾಟವಿಟ್ಟುಕೊಂಡಿದ್ದಾರೆ. ಹೀಗಾಗಿ ಅನಿತಾ ಕುಮಾರಸ್ವಾಮಿಯವರೇ ರಾಮನಗರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯಾಗಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ.

Comments are closed.