ಕರ್ನಾಟಕ

ರಾಜ್ಯ ವಿಧಾನಸಭಾ ಮತ್ತು ಲೋಕಸಭಾ ಉಪ ಚುನಾವಣಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳು

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ರಣಕಣ ಪುನಃ ರಂಗೇರಲಿದ್ದು, ರಾಜ್ಯದ 3 ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾದ ಶಿವಮೊಗ್ಗ, ಶ್ರೀ ರಾಮುಲು ಅವರ ರಾಜೀನಾಮೆಯಿಂದ ತೆರವಾದ ಬಳ್ಳಾರಿ ಹಾಗು ಸಿಎಸ್ ಪಟ್ಟರಾಜುವರ ಕ್ಷೇತ್ರದಿಂದ ತೆರವಾದ ಮಂಡ್ಯ ಲೋಕಸಭೆ ಕ್ಷೇತ್ರಗಳಿಗೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ.

ಉಳಿದಂತೆ ಎಚ್‍ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ರಾಮನಗರ ಮತ್ತು ಸಿದ್ದುನ್ಯಾಮೆಗೌಡ ನಿಧನದಿಂದ ತೆರವಾದ ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೂ ಇದೇ ವೇಳೆ ಚುನಾವಣೆ ನಡೆಯಲಿದೆ. ನವೆಂಬರ್ 3ಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 09 ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅಕ್ಟೋಬರ್ 16 ನಾಮಪತ್ರ ಸಲ್ಲಿಕೆ ಕೊನೆ ದಿನವಾಗಿದ್ದು, ಅಕ್ಟೋಬರ್ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 6ರಂದು ಫಲಿತಾಂಶ ಹೊರಬೀಳಲಿದೆ.

ಲೋಕಸಭೆಯ ಮೂರು ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳು ಯಾರು?

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ. ಕಾಂಗ್ರೆಸ್ ಪಕ್ಷದಿಂದ ಕಳೆದ ಬಾರಿ ಸ್ಪರ್ಧಿಸಿದ್ದ ಮಂಜುನಾಥ ಭಂಡಾರಿ ಹಾಗೂ ಜೆಡಿಎಸ್ ನಿಂದ ಮಧು ಬಂಗಾರಪ್ಪ ಅವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ.

ಇಂದು ಶಿಕಾರಿಪುರದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ತಮ್ಮಿಂದ ತೆರವಾದ ಸ್ಥಾನಕ್ಕೆ ತಮ್ಮ ಪುತ್ರ ಬಿಎವೈ ರಾಘವೇಂದ್ರನೇ ಅಭ್ಯರ್ಥಿ ಎಂದು ಘೋಷಿಸಿ, ಬೆಂಬಲಿಸುವಂತೆ ಮನವಿ ಮಾಡಿದರು. ಈ ವೇಳೆ ವೇದಿಕೆಯಲ್ಲಿದ್ದ ರಾಘವೇಂದ್ರ ಎದ್ದು ನಿಂತು ಕೈ ಮುಗಿದರು.

ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಯಿಂದ ಸುರೇಶ್ ಬಾಬು ಅಥವಾ ಶಾಂತ ಅವರ ನಡುವ ಪೈಪೋಟಿ ಇದ್ದು, ಕಾಂಗ್ರೆಸ್ ಪಕ್ಷದಿಂದ ಪ್ರಸಾದ್ ಅವರಿಗೆ ಟಿಕೆಟ್ ಲಭ್ಯವಾಗುವ ಸಾಧ್ಯತೆ ಇದೆ.

ಮಂಡ್ಯ ಲೋಕಸಭೆ ಕ್ಷೇತ್ರ ಈ ಬಾರಿ ತೀವ್ರ ಕುತೂಹಲ ಮೂಡಿಸಿದ್ದು, ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿ ಅಥವಾ ಲಕ್ಷ್ಮಿ ಅಶ್ವಿನ್ ಗೌಡ, ಕಾಂಗ್ರೆಸ್ ಪಕ್ಷದಿಂದ ಮಾಜಿ ಸಂಸದೆ ರಮ್ಯಾ ಅಥವಾ ರಮ್ಯಾ ಅವರ ತಾಯಿ ರಂಜಿತಾ ಹಾಗೂ ಬಿಜೆಪಿಯಿಂದ ನಂಜುಂಡೇಗೌಡ ಅಥವಾ ಚಂದಗಾಲು ಶಿವಣ್ಣ ನಡುವೆ ಟಿಕೆಟ್‍ಗಾಗಿ ಪೈಪೋಟಿ ನಡೆದಿದೆ.

ಮಂಡ್ಯ ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಲೋಕೊಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರು ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಏಕೆ ಸ್ಪರ್ಧಿಸಬಾರದು ಎಂದು ಕೇಳಿದ್ದಾರೆ.

ವಿಧಾನಸಭೆ 2 ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳು ಯಾರು?

ಸಿಎಂ ಕುಮಾರಸ್ವಾಮಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ 2 ಕ್ಷೇತ್ರಗಳಿಂದ ಸ್ಪರ್ಧೆ ಮಾಡಿ ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟ ಕಾರಣದಿಂದ ತೆರವಾಗಿದ್ದ ಸ್ಥಾನಕ್ಕೆ ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ, ಬಿಜೆಪಿ ಪಕ್ಷದಿಂದ ರುದ್ರೇಶ್ ಅವರು ಸಂಭಾವ್ಯ ಅಭ್ಯರ್ಥಿಗಳಾಗಿದ್ದಾರೆ.

ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಆನಂದ್ ನ್ಯಾಮಗೌಡರನ್ನು ಕಣಕ್ಕಿಳಿಲು ಸಿದ್ಧತೆ ನಡೆಸಿದ್ದರೆ. ಬಿಜೆಪಿಯಿಂದ ಶ್ರೀಕಾಂತ್ ಕುಲಕರ್ಣಿ, ಸಂಗಮೇಶ್ ನಿರಾಣಿ ಟಿಕೆಟ್‍ಗಾಗಿ ಪೈಪೋಟಿ ನಡೆಸಿದ್ದಾರೆ.

ಉಪಚುನಾವಣೆಯ ಫಲಿತಾಂಶ ಮುಂಬರುವ 2019 ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ಕ್ಷೇತ್ರಗಳ ಮತದಾರರು ಯಾರಿಗೆ ಬೆಂಬಲ ನೀಡಲಿದ್ದಾರೆ ಎಂದು ಕಾದುನೋಡಬೇಕಿದೆ.

Comments are closed.