ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್ (59) ಸೋಮವಾರ ಮುಂಜಾನೆ ವೇಳೆ ವಿಧಿವಶರಾಗಿದ್ದಾರೆ.
1959 ಜುಲೈ 22ರಂದು ಬೆಂಗಳೂರಿನಲ್ಲಿ ಅನಂತಕುಮಾರ್ ಜನನ. ತಂದೆ ನಾರಾಯಣ ಶಾಸ್ತ್ರಿ, ತಾಯಿ ಗಿರಿಜಾ ಶಾಸ್ತ್ರಿ. ಹುಬ್ಬಳ್ಳಿಯ ಕೆಎಸ್ ಕಲಾ ಕಾಲೇಜಿನಲ್ಲಿ ಬಿಎ ಪದವಿ ಪಡೆದಿದ್ದರು.ಜೆಎಸ್ ಎಸ್ ವಿವಿಯಲ್ಲಿ ಕಾನೂನು ಪದವಿ ಪಡೆದಿದ್ದ ಅನಂತ್ ಕುಮಾರ್ ಅವರು ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಅನಂತಕುಮಾರ್, ಡಾ.ತೇಜಸ್ವಿನಿ ದಂಪತಿಗೆ ಐಶ್ವರ್ಯ ಮತ್ತು ವಿಜೇತ ಎಂಬಿಬ್ಬರು ಹೆಣ್ಣುಮಕ್ಕಳು. .
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಅನಂತಕುಮಾರ್ ಬಿಜೆಪಿಯ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾಗಿದ್ದರು. 1996ರಲ್ಲಿ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ 1996ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಬಳಿಕ ವಾಜಪೇಯಿ ಸರ್ಕಾರದಲ್ಲಿ ವಿಮಾನಯಾನ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಅನಂತಕುಮಾರ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಆ ನಂತರ ಪ್ರಚಾರ ನಡೆಸಿ ಕೆಲವು ದಿನ ವಿಶ್ರಾಂತಿ ಮೊರೆ ಹೋಗಿದ್ದರು. ನಂತರ ವಿದೇಶದಲ್ಲಿ ಚಿಕಿತ್ಸೆ ಪಡೆದ ನಂತರ ಅನಂತಕುಮಾರ್ ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸೋಮವಾರ ನಸುಕಿನ ಜಾವ ಕೊನೆಯುಸಿರೆಳೆದರು.
ಬೆಳಗ್ಗೆ 10 ಗಂಟೆ ಬಳಿಕ ಬಸವನಗುಡಿ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ನಾಳೆ ಮಧ್ಯಾಹ್ನ ಅನಂತಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.
Comments are closed.