ಕರ್ನಾಟಕ

ರಾತ್ರಿ ಬೆಂಗಳೂರಿಗೆ ಬಂದಿಳಿದ ಕೆ.ಸಿ. ವೇಣುಗೋಪಾಲ್; ನಡುರಾತ್ರಿ ಕಾಂಗ್ರೆಸ್ ಸಭೆ

Pinterest LinkedIn Tumblr

ಬೆಂಗಳೂರು: ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಲು ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್​ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಜೊತೆಗೆ ನಡುರಾತ್ರಿ ಕಾಂಗ್ರೆಸ್​ ನಾಯಕರು ಸಭೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳೂ ಹೆಚ್ಚಾಗಿದೆ. ಬಿಜೆಪಿ, ಕಾಂಗ್ರೆಸ್​ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರಕಾರ್ಯ ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಯ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಅಮಿತ್​ ಷಾ ಕೂಡ ಪ್ರಚಾರಕಾರ್ಯದಲ್ಲಿ ಭಾಗವಹಿಸಿದ್ದರು. ಲೋಕಸಮರಕ್ಕೆ ಎರಡೂ ರಾಷ್ಟ್ರೀಯ ಪಕ್ಷಗಳು ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ರಾಜ್ಯದಲ್ಲಿ ತಮ್ಮ ಪಕ್ಷದ ಸಿದ್ಧತೆಯ ಬಗ್ಗೆ ಚರ್ಚಿಸಲು ನಿನ್ನೆ ರಾತ್ರಿ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಬೆಂಗಳೂರಿಗೆ ಆಗಮಿಸಿದ್ದಾರೆ.

ವೇಣುಗೋಪಾಲ್​ ಆಗಮಿಸುತ್ತಿದ್ದಂತೆ ಕಾಂಗ್ರೆಸ್​ ಮುಖಂಡರು ರಾತ್ರೋರಾತ್ರಿ ಸಭೆ‌ ಸೇರಿದ್ದಾರೆ. ರಾತ್ರಿ 11 ಗಂಟೆಯಿಂದ 2ರವರೆಗೆ ಕುಮಾರಕೃಪಾ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್, ಕೆಪಿಸಿ‌ಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ‌. ಶಿವಕುಮಾರ್ ಭಾಗಿಯಾಗಿದ್ದಾರೆ. ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​- ಜೆಡಿಎಸ್​ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಮತ್ತು ಯಾವ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬಹುದು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹಾಗೇ, ಹಾಲಿ ಸಂಸದರಿರುವ ಕ್ಷೇತ್ರಗಳ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಮಂಡ್ಯದಿಂದ ಸುಮಲತಾ ಅಂಬರೀಷ್ ಸ್ಪರ್ಧೆಯ ಬಗ್ಗೆಯೂ ರಾಜ್ಯ ನಾಯಕರು ವೇಣುಗೋಪಾಲ್​ ಅವರಿಗೆ ಮಾಹಿತಿ ನೀಡಿದ್ದಾರೆ. ಮೈತ್ರಿ ಸರ್ಕಾರದ ಇತ್ತೀಚಿನ ಕಾರ್ಯವೈಖರಿ, ಸಿಎಂ ಕುಮಾರಸ್ವಾಮಿ ಅವರ ಬೆಗ್ಗರ್ಸ್​ ಹೇಳಿಕೆ ಬಗ್ಗೆ ಕೂಡ ಕೆ ಸಿ ವೇಣುಗೋಪಾಲ್ ಮಾಹಿತಿ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Comments are closed.