ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರೋಧಿಗಳು ದೇಶದ್ರೋಹಿಗಳಾಗಲು ಹೇಗೆ ಸಾಧ್ಯ? ನಾವು ಕೂಡ ದೇಶದ ಮೂಲ ನಿವಾಸಿಗಳು. ನಮಗೂ ದೇಶದ ಮೇಲೆ ಹಾಗೂ ಯೋಧರ ಮೇಲೆ ಅಪಾರ ಗೌರವ ಇದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಸಭೆ ನಡೆಯಲಿದೆ. ಈಗಾಗಲೇ ಚಿಕ್ಕೋಡಿ ಕ್ಷೇತ್ರಕ್ಕೆ ಸಂಸದ ಪ್ರಕಾಶ ಹುಕ್ಕೇರಿ ಅಭ್ಯರ್ಥಿಯಾಗಿದ್ದಾರೆ. ಆದರೆ ಬೆಳಗಾವಿ ಕ್ಷೇತ್ರಕ್ಕೆ ಯೋಗ್ಯ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಟ್ಯಾಂಕರ್ ಮೂಲಕ ನೀರು ಸರಬಾರಜಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಮದುರ್ಗ ಮಾಜಿ ಶಾಸಕ ಅಶೋಕ ಪಟ್ಟಣ ಆಪ್ತ ಶಫಿ ಬೆನ್ನಿ ದೇಶ ವಿರೋಧಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದೆ. ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ.
ಇದಕ್ಕೂ ಮುನ್ನ ಸಚಿವರು ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಕುಡಿಯುವ ನೀರು, ಅಕ್ರಮ ಮರಳುಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳಿಂದ ಹಾಗೂ ಶಾಸಕರಿಂದ ಮಾಹಿತಿ ಪಡೆದರು. ಸಭೆಗೆ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಗೈರಾಗಿದ್ದರೆ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಾಜರರಾಗಿದ್ದರು.
Comments are closed.