ಕರ್ನಾಟಕ

ಬರ ಪರಿಸ್ಥಿತಿಯನ್ನು ಇನ್ನಷ್ಟು ಸಮರ್ಪಕವಾಗಿ ಎದುರಿಸಲು ಸಜ್ಜಾಗಿ

Pinterest LinkedIn Tumblr


ಹಾಸನ: ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಇನ್ನಷ್ಟು ಸಮರ್ಪಕವಾಗಿ ಎದುರಿಸಲು ಎಲ್ಲ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೆಶಿಪ್ ಮುಖ್ಯ ಯೋಜನಾಧಿಕಾರಿ ನವೀನ್‌ರಾಜ್ ಸಿಂಗ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯ 8 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದ್ದು, ಜನ-ಜಾನುವಾರುಗಳಿಗೆ ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ವಿಶೇಷ ನಿಗಾ ವಹಿಸಬೇಕು ಎಂದರು.

ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ. ಯಾವುದೇ ಗ್ರಾಮವೂ ಕುಡಿಯುವ ನೀರಿನ ಪೂರೈಕೆಯಿಂದ ವಂಚಿತವಾಗಬಾರದು. ಕೊಳವೆಬಾವಿ, ಟ್ಯಾಂಕರ್ ಸೇರಿದಂತೆ ಯಾವುದೇ ರೂಪದಲ್ಲಿಯಾದರೂ ನೀರು ಒದಗಿಸಬೇಕು ಎಂದು ತಿಳಿಸಿದರು.

ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗಬಾರದು. ಜಿಲ್ಲೆಯಲ್ಲಿ ಮೇವಿನ ಲಭ್ಯತೆ ಬಗ್ಗೆ ಸಮೀಕ್ಷೆ ನಡೆಸಿ ಸಮಸ್ಯಾತ್ಮಕ ಪ್ರದೇಶಗಳಲ್ಲಿ ಮೇವು ಬ್ಯಾಂಕ್ ಹಾಗೂ ಗೋಶಾಲೆ ತೆರೆಯಬೇಕು ಎಂದು ನಿರ್ದೇಶನ ನೀಡಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯಡಿ ಕೆಲಸ ಸೃಷ್ಟಿಸಬೇಕು. ಅಂತರ್ಜಲ ಹೆಚ್ಚಳಕ್ಕೆ ಕ್ರಮ ವಹಿಸಬೇಕು ಎಂದರು.

ಇನ್ನೇನು ಮುಂಗಾರು ಪ್ರಾರಂಭವಾಗಲಿದ್ದು ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕುಗಳ ಹವಾಗುಣಕ್ಕೆ ಅನುಗುಣವಾಗಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿಗೆ ಕ್ರಮ ವಹಿಸಬೇಕು. ಬೇಸಾಯದ ಬಗ್ಗೆ ರೈತರಿಗೆ ಪೂರಕ ಮಾಹಿತಿ ಹಾಗೂ ಸಹಕಾರ ನೀಡಬೇಕು ಎಂದು ನವೀನ್‌ರಾಜ್ ಸಿಂಗ್ ಸೂಚಿಸಿದರು.

ಈಗಾಗಲೇ 20,000 ಟನ್ ಬಿತ್ತನೆ ಆಲೂಗಡ್ಡೆ ದಾಸ್ತಾನಾಗಿದ್ದು, ಅಗತ್ಯಕ್ಕೆ ತಕ್ಕಂತೆ ಅದನ್ನು ವಿತರಿಸಬೇಕು ಎಂದ ಅವರು, ಸಬ್ಸಿಡಿ ಬಿಡುಗಡೆಗೆ ಸಂಬಂಧಿಸಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದರು.
ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ನೆರವು ನೀಡಬೇಕು. ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ ಬಾಕಿ ಬಿಲ್‌ಗಳನ್ನು ಶೀಘ್ರ ಪಾವತಿಗಾಗಿ ಸಲ್ಲಿಸುವಂತೆ ತಿಳಿಸಿದರು.

ಕುಡಿಯುವ ನೀರು ಪೂರೈಕೆಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾಹಿತಿ ನೀಡಿದರು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಬಗ್ಗೆ ಜಿ.ಪಂ. ಉಪ ಕಾರ್ಯದರ್ಶಿ ಪುಟ್ಟಸ್ವಾಮಿ ವಿವರಿಸಿದರು. ಉಪ ವಿಭಾಗಾಧಿಕಾರಿಗಳಾದ ಡಾ.ಎಚ್.ಎಲ್.ನಾಗರಾಜು, ಕವಿತಾ ರಾಜಾರಾಂ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Comments are closed.