ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೀನಾಯವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದು, ಬಿಜೆಪಿಗೆ ಹಿಂದೆಂದೂ ಇಲ್ಲದಂತಹ ಐತಿಹಾಸಿಕ ಗೆಲುವು ದೊರೆತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಬಣ್ಣಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರನ್ನು ಟೀಕಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ನಾಯಕರು ಈಗ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇನ್ನು ಮುಂದಾದರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದರು.
ರಾಜ್ಯದ ಘಟಾನುಘಟಕ ನಾಯಕರುಗಳಾದ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ ಹೀನಾಯವಾಗಿ ಸೋತಿದ್ದು, ಇದು ನರೇಂದ್ರ ಮೋದಿ ಅವರ ಗೆಲುವಾಗಿದೆ. ಮೋದಿ ಅವರ ನಾಯಕತ್ವದಲ್ಲಿ ದೇಶ ಬದಲಾವಣೆ ಕಾಣುತ್ತಿರುವುದು ಸ್ಪಷ್ಟವಾಗಿದೆ ಎಂದರು.
ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಇಲ್ಲದ ಗೆಲುವು ಇದಾಗಿದೆ. ಶೇ 54 ರಷ್ಟು ಮತ ಬಿಜೆಪಿಗೆ ಲಭಿಸಿದ್ದು, ಇದೊಂದು ದಾಖಲೆಯಾಗಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ ಭಾಗದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಆಡಳಿತಾರೂಢ ಮೈತ್ರಿ ಸರ್ಕಾರದ ಭ್ರಷ್ಟಾಚಾರ, ವರ್ಗಾವಣೆ ದಂಧೆ, ಅಭಿವೃದ್ಧಿ ಮಾಡುವುದಾಗಿ ಸುಳ್ಳು ಹೇಳುತ್ತಿರುವ ಮೈತ್ರಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.