ಕೇರಳದಲ್ಲಿ ಮಹಾಮಾರಿ ನಿಫಾ ಕಾಣಿಸಿಕೊಂಡಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉಡುಪಿ,ಕೊಡಗು,ಉತ್ತರ ಕನ್ನಡ,ಚಿಕ್ಕಮಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ನಿಫಾ ಹರಡುವ ಆತಂಕ ಎದುರಾಗಿದೆ.
ಈಗಾಗಲೇ 8 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ಈ ರೋಗದ ಲಕ್ಷಣ ಕಂಡು ಬಂದಲ್ಲಿ ಜಾಗರೂಕತೆಯಿಂದ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ನಿಫಾ ಬಗ್ಗೆ ನಿಗಾ ಇಡುವಂತೆ ಸರ್ಕಾರಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಆದೇಶ ನೀಡಿದ್ದು, ಪ್ರತಿ ಹಾಸ್ಪತ್ರೆಯಲ್ಲಿ ನಿಫಾ ರೋಗಿಗಳಿಗಾಗಿ ಪ್ರತ್ಯೇಕ 2 ಬೆಡ್ ಇಡಲಾಗಿದೆ. ಮಂಗಳೂರಿನಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳೂರು ಭಾಗದಿಂದ ಪ್ರತಿನಿತ್ಯ ಸಾವಿರಾರು ಜನರು ಕೇರಳದ ಗಡಿಭಾಗಗಳಿಗೆ ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗೆ ಸಂಚರಿಸುತ್ತಾರೆ.
ಈ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣ ಸೇರಿದಂತೆ ಬಸ್ ನಿಲ್ದಾಣಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದ್ದು, ಜನರೂ ಯಾವುದೇ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸದಂತೆ ಸೂಚನೆ ನೀಡಲಾಗಿದೆ.