ಕರ್ನಾಟಕ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ, ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು: ಶೋಭಾ ಕರಂದ್ಲಾಜೆ

Pinterest LinkedIn Tumblr

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಿ ಮತ್ತೊಂದು ಸರ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ನಾಗೇಶ್ ರಾಜೀನಾಮೆ ಕುರಿತಂತೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಪಕ್ಷೇತರ ಶಾಸಕ ನಾಗೇಶ್ ಬಿಜೆಪಿಗೆ ಬರುವುದಾದರೆ ಸ್ವಾಗತಿಸುವುದಾಗಿ ಹೇಳಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಬಂಡಾಯ ಶಾಸಕರೊಂದಿಗೆ ನಾವು ಸಂಪರ್ಕದಲ್ಲಿ ಇಲ್ಲ. ಪಕ್ಷದ ತತ್ವ ಸಿದ್ದಾಂತ ಒಪ್ಪಿ ಬರುವವರಿಗೆ ಸ್ವಾಗತಿಸುವುದಾಗಿ ಅವರು ಹೇಳಿದರು.

ಮತ್ತೊಂದೆಡೆ ರಾಜಭವನವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ, ಅಂತಹ ಸಂಸ್ಕೃತಿ ನಮ್ಮದಲ್ಲ, ಕಾಂಗ್ರೆಸ್ ಆಡಳಿತ ಇದ್ದಾಗ ರಾಜಭವವನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.

ಕೆಲವು ಶಾಸಕರ ರಾಜೀನಾಮೆಯನ್ನು ಹರಿದು ಹಾಕಿದ ಕಾಂಗ್ರೆಸ್ ಪಕ್ಷ ಈಗ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸುತ್ತಿದೆ. ಅವರು ಭ್ರಮೆಯಲ್ಲಿದ್ದಾರೆ, ಪರಿಸ್ಥಿತಿಯನ್ನು ಇನ್ನೂ ರಕ್ಷಿಸಲು ಸಾಧ್ಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ಮುಖಂಡ ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ.

Comments are closed.