ಕರ್ನಾಟಕ

ಕೊಡಗು ಆಸುಪಾಸಿನಲ್ಲಿ ವ್ಯಾಪಕ ಮಳೆ; ಕರ್ನಾಟಕ – ಕೇರಳ ನಡುವಿನ ಹೆದ್ದಾರಿಯಲ್ಲಿ ಭೂ ಕುಸಿತ

Pinterest LinkedIn Tumblr

ಮಡಿಕೇರಿ: ಕೊಡಗು ಆಸುಪಾಸಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ ಅಂತಾರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ವಾಹನಗಳ ಸಂಚಾರಕ್ಕೆ ರಸ್ತೆಯನ್ನು ಶೀಘ್ರ ದುರಸ್ಥಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಾಕುಟ್ಟ ರಸ್ತೆ ಸಂಪರ್ಕ ಕಡಿತಗೊಂಡಿರುವ ಪರಿಣಾಮ ಕೇರಳಕ್ಕೆ ತೆರಳುವ ವಾಹನಗಳು ಇದೀಗ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ಕುಟ್ಟ ಗ್ರಾಮದ ಮೂಲಕ ಸಂಚರಿಸುತ್ತಿವೆ.

ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ. ಭಾಗಮಂಡಲದಲ್ಲಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.

ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

Comments are closed.