ಕರ್ನಾಟಕ

ರಾಜ್ಯದಲ್ಲಿ ಪ್ರವಾಹದಿಂದ 6 ಸಾವಿರ ಕೋಟಿ ಹಾನಿಯಾಗಿದ್ದು, ಕೂಡಲೇ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಮೋದಿಗೆ ಮನವಿ ಮಾಡಿದ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಲ್ಲಿ ಮಳೆ ಹಾಗೂ ಪ್ರವಾಹದಿಂದ ಭಾರಿ ಪ್ರಮಾಣದ ಹಾನಿ ಸಂಭವಿಸಿದ್ದು, ಸುಮಾರು 6,000 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಪ್ರವಾಹದಿಂದ ರಾಜ್ಯದಲ್ಲಿ 6 ಸಾವಿರ ಕೋಟಿಗೂ ಹೆಚ್ಚು ಹಾನಿಯಾಗಿದ್ದು, ಮೂರು ಸಾವಿರ ಕೋಟಿ ರೂಪಾಯಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದರು.

ಪ್ರವಾಹ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ 100 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 12, 651 ಮನೆಗಳು ವಾಸಕ್ಕೆ ಯೋಗ್ಯವಿಲ್ಲದಷ್ಟು ಹಾನಿಗೊಳಗಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸಿಕೊಡಲಾಗುವುದು ಎಂದು ಸಿಎಂ ತಿಳಿಸಿದರು.

ಕಳೆದ ವಾರ ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿ ಮಾಹಿತಿ ಪಡೆಯಲಾಗಿತ್ತು. ನಂತರ ನಾನೇ ಸ್ವತಃ ರಾಯಚೂರು, ವಿಜಯಪುರ, ಬಾಗಲಕೋಟೆ, ಗದಗ, ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದೇನೆ. ಇಲ್ಲಿನ ಸಮಗ್ರ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದೇನೆ. ಆಗಸ್ಟ್​ 5ರಂದು ಕೆಲವು ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿ ದೆಹಲಿಗೆ ತೆರಳಿದ್ದೆ. ಅಂದು ಜಲಸಂಪನ್ಮೂಲ ಹಾಗೂ ಗೃಹ ಸಚಿವರನ್ನು ಭೇಟಿಯಾಗಿ ವರದಿ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರದ ಪರವಾಗಿ ನಿರ್ಮಲಾ ಸೀತಾರಾಮನ್​ ಅವರು ಆಗಮಿಸಿ ಈಗಾಗಲೇ ಪರಿಸ್ಥಿತಿ ನೋಡಿದ್ದಾರೆ. ಪರಿಹಾರ ಸಿಗುತ್ತದೆ ಎಂಬ ಭರವಸೆ ಇದೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದಕ್ಕಿಂತ ಹಾನಿಗೆ ಪರಿಹಾರ ಸಿಗುವುದು ಮುಖ್ಯ ಎಂದು ಯಡಿಯೂರಪ್ಪ ಹೇಳಿದರು.

ಮಳೆ ಹಾಗೂ ಪ್ರವಾಹದಿಂದಾಗಿ ಇದುವರೆಗೆ 24 ಮಂದಿ ಮೃತಪಟ್ಟಿದ್ದಾರೆ. ಎಲ್ಲಾ ಕಡೆಗಳಲ್ಲೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಕ್ಷಣಾ ಕಾರ್ಯಕ್ಕೆ ಕೇಂದ್ರ ಸರ್ಕಾರ ನೆರವು ನೀಡಿದೆ. ಸಕಾಲದಲ್ಲಿ ಸ್ಪಂದಿಸಿದೆ. ಪ್ರಸ್ತುತ ಎನ್​ಡಿಆರ್​ಎಫ್​ನ 20 ತಂಡಗಳು, ಭೂಸೇನೆಯ 11, ನೌಕಾಪಡೆಯ 5 ತಂಡಗಳು, ದೋಣಿಗಳು, ವಾಯುಪಡೆಯ 4 ಹೆಲಿಕಾಪ್ಟರ್​ಗಳು, ಎಸ್​ಜಿಆರ್​ಎಫ್​ನ ಎರಡು ತಂಡಗಳು, ಅಗ್ನಿಶಾಮಕದಳ, ಪೊಲೀಸ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದರು.

Comments are closed.