
ಈಗಾಗಲೇ ಭಾರೀ ಮಳೆ, ಪ್ರವಾಹದಲ್ಲಿ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಕೂಡ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಮಲೆನಾಡು ಸೇರಿದಂತೆ ಹಲವು ಕಡೆ ಮಳೆಯಾಗಲಿದ್ದು, ಅತಿ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ರೆಡ್ ಆಲರ್ಟ್ ಘೋಷಣೆ ಮಾಡಲಾಗುವುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನೈರುತ್ಯ ಮಾರುತಗಳು ದಟ್ಟ ಮೋಡ ಸೃಷ್ಟಿಸಲಿದ್ದು, ಭಾರೀ ಗಾಳಿ ಉಂಟಾಗಲಿದೆ. ಈ ಮಳೆ ಮಾರುತಗಳು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ರಾಜ್ಯದ ಕೇಂದ್ರ ಭಾಗಗಳಲ್ಲಿ ಹಾನಿಯುಂಟು ಮಾಡಲಿದೆ ಎಂದಿದ್ದಾರೆ.
ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳು ಸೇರಿದಂತೆ ವಾಯುವ್ಯ ಪ್ರದೇಶಗಳಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಸೋಮವಾರ ಸುರಿದ ಭಾರೀ ಮಳೆಯಿಂದಾಗಿ ದಕ್ಷಿಣದ ನಾಲ್ಕು ರಾಜ್ಯಗಳು ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಗ್ರಾಮ ಹಾಗೂ ಪಟ್ಟಣಗಳು ಪ್ರವಾಹಕ್ಕೆ ತುತ್ತಾಗಿದ್ದು, ಭೂ ಕುಸಿತದಿಂದಾಗಿ ರಸ್ತೆ ಸಂಪರ್ಕಗಳು ಕಡಿತಗೊಂಡಿದೆ.
ವಾಯುವ್ಯ ಪ್ರದೇಶದಲ್ಲಿ ಮಳೆ ಪ್ರಮಾಣ ತಗ್ಗಿದರೂ, ಅಣೆಕಟ್ಟುಗಳಿಂದ ಅಗಾಧ ಪ್ರಮಾಣದ ನೀರು ಹೊರ ಬಿಡುತ್ತಿರುವ ಹಿನ್ನೆಲೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹಾನಿ ಹೆಚ್ಚಾಗಿದೆ ಎಂದಿದ್ದಾರೆ.
ರಕ್ಷಣಾ ಮತ್ತು ಪರಿಹಾರ ಕಾರ್ಯ ಭರದಿಂದ ಸಾಗಿದ್ದು, ಈವರೆಗೆ 2 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
Comments are closed.