ಕರ್ನಾಟಕ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

Pinterest LinkedIn Tumblr


ಬೆಂಗಳೂರು(ಅ.20): ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ ಬೆನ್ನಲ್ಲೇ ಉತ್ತರ ಕರ್ನಾಟಕ, ಕರಾವಳಿ, ಕೊಡಗು, ಮಲೆನಾಡಿನ ಅನೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಬೆಂಗಳೂರಿನಂತಹ ಪ್ರಮುಖ ನಗರಗಳಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪ್ರಭಾವದಿಂದ ಮುಂದಿನ 48 ಗಂಟೆಗಳ ಕಾಲ ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎನ್ನಲಾಗುತ್ತಿದೆ.

ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೂ ಮಳೆಯಾಗಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಾಳೆ ಕಲಬುರಗಿ , ದಕ್ಷಿಣ ಒಳನಾಡಿನ ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ನಾಳೆಯೂ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಮುನ್ಸೂಚನೆ ಪ್ರಕಾರ ಎರಡು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರಿಯಲಿದೆ.

ಕಳೆದೊಂದು ವಾರದಿಂದ ಆಗಾಗ ಪ್ರತ್ಯಕ್ಷನಾಗಿ ಆರ್ಭಟಿಸುವ ಮಳೆರಾಯ ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ವರ್ಷಧಾರೆ ಸುರಿಸಲಿದ್ದಾನೆ. ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 30.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.3 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 29.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.5 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 29.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ 18.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Comments are closed.