ಕರ್ನಾಟಕ

ಅನರ್ಹ ಶಾಸಕರನ್ನು ಗೆಲ್ಲಿಸಿ, ಅಧಿಕಾರ ಉಳಿಸಿಕೊಳ್ಳಲು ಮುಂದಾದ ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು: ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿ ಆಗುವ ಮುನ್ನವೇ ಅನರ್ಹರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಯೋಜನೆಯನ್ನು ಸಿಎಂ ಮಾಡಿಕೊಂಡಿದ್ದಾರೆ. ನವೆಂಬರ್ 3ರಿಂದ ಅನರ್ಹರ ಕ್ಷೇತ್ರಗಳಿಗೆ ತೆರಳಲಿರುವ ಸಿಎಂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಅನರ್ಹರ ಪರ ಅಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಅನರ್ಹ ಶಾಸಕ ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸಿಎಂ ನವೆಂಬರ್ 3ರಂದು ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಸುಧಾಕರ್ ಪರ ಸಿಎಂ ಮತ ಕೇಳುವ ಸಾಧ್ಯತೆಗಳಿವೆ. ನವೆಂಬರ್ 7ರಂದು ಕಾಂಗ್ರೆಸ್ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಪ್ರತಿನಿಧಿಸುವ ಹಿರೇಕೆರೂರಿನಲ್ಲಿ ಸಿಎಂ ಪ್ರಚಾರ ನಡೆಸಲಿದ್ದಾರೆ. ನವೆಂಬರ್ 10ರಂದು ಆನಂದ್ ಸಿಂಗ್ ಪ್ರತಿನಿಧಿಸುವ ವಿಜಯನಗರ(ಹೊಸಪೇಟೆ)ದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಯಡಿಯೂರಪ್ಪನವರು ಭಾಗಿಯಾಗಲಿದ್ದಾರೆ. ಕಳೆದ ವಾರ ಎಂಟಿಬಿ ನಾಗರಾಜ್ ಪ್ರತಿನಿಧಿಸುವ ಹೊಸಕೋಟೆಯಲ್ಲಿ ಸಿಎಂ ಪರೋಕ್ಷವಾಗಿ ಪ್ರಚಾರ ನಡೆಸಿದ್ದರು.

15 ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಚುನಾವಣೆ ನಡೆಯಲಿದ್ದು, ಡಿ.9 ರಂದು ಮತ ಎಣಿಕೆ ನಡೆಯಲಿದೆ. ನವೆಂಬರ್ 11ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ನ.18ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನ.18ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು ನ.21 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಗಣನೆ ಆಗಲಿದೆ.

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತೆರವಾದ ಕ್ಷೇತ್ರಗಳಿಗೆ 6 ತಿಂಗಳ ಒಳಗಡೆ ಚುನಾವಣೆ ನಡೆಸಬೇಕಾಗುತ್ತದೆ.

Comments are closed.