ಕರ್ನಾಟಕ

ಹಲ್ಲೆ ಖಂಡಿಸಿ ಮಿಂಟೋ ವೈದ್ಯರ ಮುಷ್ಕರ; ಇಂದು ರಾಜ್ಯಾದ್ಯಂತ ಒಪಿಡಿ ಬಂದ್

Pinterest LinkedIn Tumblr


ಬೆಂಗಳೂರು: ಮಿಂಟೋ ಆಸ್ಪತ್ರೆಯ ಕಿರಿಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಇಂದು ರಾಜ್ಯಾದ್ಯಂತ ಒಪಿಡಿ ಸೇವೆ ಸ್ಥಗಿತಗೊಳಿಸಲು ವೈದ್ಯರು ನಿರ್ಧರಿಸಿದ್ದಾರೆ.

ಮಿಂಟೋ ವೈದ್ಯರ ಮುಷ್ಕರಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಹಾಗೂ ಫನಾ ಸೇರಿದಂತೆ ವಿವಿಧ ವೈದ್ಯಕೀಯ ಸಂಘಗಳು ಬೆಂಬಲ ನೀಡಿದ್ದು ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ವರೆಗೆ ರಾಜ್ಯವ್ಯಾಪಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳಿಸುವ ಮೂಲಕ ವೈದ್ಯರು ಪ್ರತಿಭಟಿಸಲು ನಿರ್ಧರಿಸಿದ್ದಾರೆ. ವೈದ್ಯರ ಈ ನಡೆಯಿಂದ ರೋಗಿಗಳಿಗೆ ತೊಂದರೆಯಾಗುವ ಆತಂಕ ಎದುರಾಗಿದೆ.

ನವೆಂಬರ್ 1 ರಂದು ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ವಿರುದ್ಧ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ 10 ಜನರು ಕಣ್ಣು ಕಳೆದುಕೊಂಡಿದ್ದರು. ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಹಾಗೂ ವೈದ್ಯರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಕಿರಿಯ ವೈದ್ಯರೊಬ್ಬರ ಮೇಲೆ ಕರವೇ ಮುಖಂಡೆಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂಬುವುದು ವೈದ್ಯರ ಆರೋಪ.

ಇದನ್ನು ಖಂಡಿಸಿ ಮಿಂಟೋ ಆಸ್ಪತ್ರೆಯ ವೈದ್ಯರು ನಡೆಸುತ್ತಿರುವ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಸ್ವತಃ ಡಿಸಿಎಂ ಡಾ. ಆಶ್ವಥ್ ನಾರಾಯಣ ಮನವಿ ಮಾಡಿಕೊಂಡರು ವೈದ್ಯರು ಜಗ್ಗಲಿಲ್ಲ. ಈ ನಡುವೆ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಕೂಡಾ ವೈದ್ಯರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ವೈದ್ಯರ ಮುಷ್ಕರಕ್ಕೆ ವಿವಿಧ ವೈದ್ಯಕೀಯ ಸಂಘಟನೆಗಳು ಬೆಂಬಲ ಸೂಚಿಸಿವೆ. ಆರೋಗ್ಯ ಸಚಿವ ಶ್ರೀರಾಮುಲು ಕೂಡಾ ಹಲ್ಲೆಯನ್ನು ಖಂಡಿಸಿದ್ದಾರೆ. ಹೀಗಿದ್ದರು ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವೈದ್ಯರು ಶುಕ್ರವಾರ ಒಪಿಡಿ ಬಂದ್ ನಡೆಸಲು ಕರೆ ನೀಡಿದ್ದಾರೆ.

Comments are closed.