ಕರ್ನಾಟಕ

ನಿತ್ಯಾನಂದ ಸ್ವಾಮಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

Pinterest LinkedIn Tumblr


ಗಾಂಧಿನಗರ: ಯುವತಿಯರಿಗೆ ಚಿತ್ರ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನಿಗಾಗಿ ಗುಜರಾತ್ ಪೊಲೀಸರು ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.

ಬೆಂಗಳೂರಿನ ದಂಪತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ನಿತ್ಯಾನಂದನಿಗಾಗಿ ಶೋಧ ಕಾರ್ಯ ಪ್ರಾರಂಭಿಸಿದ್ದು, ನಿತ್ಯಾನಂದನ ಆಶ್ರಮದ ಅಹಮದಾಬಾದ್ ಶಾಖೆಯಲ್ಲಿದ್ದ ಹೆಣ್ಣುಮಕ್ಕಳನ್ನು ಹಿಂಸಿಸುತ್ತಿದ್ದ ಎಂದು ದಂಪತಿ ದೂರು ನೀಡಿದ್ದಾರೆ.

ಅಹ್ಮದಾಬಾದ್ ಜಿಲ್ಲೆಯ ಹಿರಾಪುರ ಗ್ರಾಮದಲ್ಲಿರುವ ಶಾಲೆಯೊಂದರ ಆವರಣದಲ್ಲಿ ನಿತ್ಯಾನಂದನ ಆಶ್ರಮವಿದೆ. ಅಲ್ಲದೆ ಬೆಂಗಳೂರಿನ ಬಿಡದಿಯಲ್ಲಿ ಧ್ಯಾನಪೀಠಂ ಎಂಬ ಹೆಸರಿನ ವಿಶಾಲವಾದ ಆಶ್ರಮವನ್ನು ಸಹ ನಡೆಸುತ್ತಿದ್ದಾರೆ. 5 ವರ್ಷಗಳ ಅವಧಿಯಲ್ಲಿ ಶಿಷ್ಯೆ ಮೇಲೆಯೇ ಅತ್ಯಾಚಾರ ಎಸಗಿರುವ ಎಂಬ ಪ್ರಕರಣದಲ್ಲಿ ಆರೋಪಿಯಾಗಿರುವ ನಿತ್ಯಾನಂದ ಒಂದು ವರ್ಷದಿಂದಲೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿಲ್ಲ.

ಸೆಪ್ಟೆಂಬರ್ 2018ರಲ್ಲಿ ನಿತ್ಯಾನಂದನ ಪಾಸ್‍ಪೋರ್ಟ್ ಅವಧಿ ಮುಗಿದ ಕಾರಣ ಅವರು ಅಕ್ರಮವಾಗಿ ದೇಶವನ್ನು ತೊರೆದಿರಬಹುದು ಎಂದು ಗುಜರಾತ್ ಪೊಲೀಸರು ಶಂಕಿಸಿದ್ದಾರೆ. ಸ್ವಯಂ ಘೋಷಿತ ದೇವ ಮಾನವನ ವಿರುದ್ಧ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಪಾಸ್‍ಪೋರ್ಟ್ ನವೀಕರಿಸುವ ಕುರಿತ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಪ್ರಕರಣದ ವಿಚಾರಣೆಗಾಗಿ ಡಿಸೆಂಬರ್ 9ರಂದು ನಿತ್ಯಾನಂದ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. ಕೋರ್ಟ್‍ನ ವಿಚಾರಣೆಯಿಂದ ಈಗಾಗಲೇ ನಿತ್ಯಾನಂದ ಹಲವು ಬಾರಿ ತಪ್ಪಿಸಿಕೊಂಡಿದ್ದು, ಇದೀಗ ಮತ್ತೆ ವಿವಾದ ಎದ್ದಿರುವುದರಿಂದಾಗಿ ಎಂದಿನಂತೆ ಈ ಬಾರಿಯೂ ಸಹ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಪೊಲೀಸರು ಶಂಕಿಸಿದ್ದಾರೆ.

ಈತ ತನ್ನ ಅನುಯಾಯಿಗಳಿಂದ ದೇಣಿಗೆ ಸಂಗ್ರಹಿಸಲು ಹಾಗೂ ಗುಜರಾತ್‍ನ ಅಹಮದಾಬಾದ್‍ನಲ್ಲಿ ಆಶ್ರಮ ನಡೆಸಲು ಮಕ್ಕಳನ್ನು ಅಪಹರಿಸಿ ಬಂಧಿಸಿದ್ದಾನೆ ಎಂಬ ಆರೋಪದ ಮೇಲೆ ನವೆಂಬರ್ 19ರಂದು ನಿತ್ಯಾನಂದನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಪಹರಣ, ಹಲ್ಲೆ, ಅಕ್ರಮ ಬಂಧನ ಆರೋಪದ ಮೇಲೆ ಈತನ ಇಬ್ಬರು ಶಿಷ್ಯೆಯರಾದ ಪ್ರಾಣಪ್ರಿಯ, ಪ್ರಿಯತತ್ವ ಅವರನ್ನು ಒಂದೇ ದಿನ ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಿತ್ಯಾನಂದನ ಆಶ್ರಮಕ್ಕೆ ಶಾಲೆಯ ಜಾಗವನ್ನು ಹೇಗೆ ಬಳಸಿಕೊಳ್ಳಲಾಯಿತು ಎಂಬುದರ ಕುರಿತು ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.