
ಬೆಂಗಳೂರು: ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 1 ಲಕ್ಷ ರೂಪಾಯಿ ಬಿಡುಗಡೆ ಮಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರದೊಳಗೆ ಜಿಲ್ಲೆಗಳಿಗೆ ಭೇಟಿ ನೀಡಿ, ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದರು.
ಭೂ ಕುಸಿತ ಹಾಗೂ ಇನ್ನಿತರ ಕಾರಣಗಳಿಂದ ಮನೆ ನಿರ್ಮಿಸಲು ಸಾಧ್ಯವಾಗದ ಕಡೆಗಳಲ್ಲಿ ಪರ್ಯಾಯ ಜಮೀನು ಒದಗಿಸಬೇಕು ಎಂದು ಅಧಿಕಾರಿಗಳ ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.
ಸರ್ಕಾರದಿಂದ ರೈತರ ಸಾಲ ಮನ್ನಾ ವಿಚಾರವಾಗಿ ಬಿಎಸ್ವೈ ಚರ್ಚೆ ಮಾಡಿದರು. ಈವರೆಗೆ 5.06 ಲಕ್ಷ ರೈತರಿಗೆ 785.94 ಕೋಟಿ ರೂ. ಬೆಳೆ ಪರಿಹಾರ ಸಿಕ್ಕಿದೆ. ಸುಮಾರು 37 ಸಾವಿರ ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗಿರದ ಕಾರಣ ಪರಿಹಾರ ಪಾವತಿಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಎಸ್ವೈ, ಈ ಬಗ್ಗೆ ಪರ್ಯಾಯ ವಿಧಾನಗಳನ್ನು ಅನುಸರಿಸುವಂತೆ ಸೂಚನೆ ನೀಡಿದರು. ಅಲ್ಲದೆ ಒಂದು ವಾರದೊಳಗೆ ಪರಿಹಾರ ಪಾವತಿ ಪೂರ್ಣಗೊಳಿಸುವಂತೆ ಹೇಳಿದರು.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಖಾತೆಗಳಿಗೆ ಜಮೆ ಆದ ಇನ್‍ಪುಟ್ ಸಬ್ಸಿಡಿ ಮತ್ತು ಬೆಳೆ ವಿಮೆ ಪರಿಹಾರ ಮೊತ್ತಗಳನ್ನು ಸಾಲ ಖಾತೆಗೆ ಜಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಎಸ್ವೈ, ಈ ಬಗ್ಗೆ ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಭೆಯಲ್ಲಿ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಸೂಚನೆ ನೀಡಿದರು. ಮತ್ತೊಮ್ಮೆ ಈ ಬಗ್ಗೆ ಲಿಖಿತ ಸೂಚನೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು. ಕಾರ್ಯದರ್ಶಿಗಳು ನಿಯಮಿತವಾಗಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವರದಿಗಳನ್ನು ಆಯಾ ಸಚಿವರಿಗೆ ಸಲ್ಲಿಸಬೇಕು. ಇದರಿಂದ ಸಮಸ್ಯೆಗಳೇನಾದರೂ ಇದ್ದಲ್ಲಿ ಬಗೆಹರಿಸಲು ಸುಲಭವಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
Comments are closed.