ಕರ್ನಾಟಕ

ಕಣ್ಣೂರಿನಲ್ಲಿ ಯಡಿಯೂರಪ್ಪ ಕಾರಿಗೆ ಮುತ್ತಿಗೆ, ಪ್ರತಿಭಟನೆ

Pinterest LinkedIn Tumblr


ಕೇರಳ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ, ಹಿಂಸಾಚಾರದಲ್ಲಿ ಪೊಲೀಸರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕೇರಳದ ಕಣ್ಣೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಕೇರಳ ಪ್ರವಾಸದಲ್ಲಿರುವ ಬಿಎಸ್ ಯಡಿಯೂರಪ್ಪಗೆ ಪ್ರತಿಭಟನೆಯ ಬಿಸಿ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಂದೇ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ, ಕಲ್ಲುತೂರಾಟ ನಡೆದಿತ್ತು. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಸಾವನ್ನಪ್ಪಿದ್ದರು.

ಕಣ್ಣೂರಿನಲ್ಲಿ ಬಿಎಸ್ ಯಡಿಯೂರಪ್ಪ ದೇವಸ್ಥಾನಕ್ಕೆ ಭೇಟಿ ನೀಡುವ ವೇಳೆ ಡಿವೈಎಫ್ ಐ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ. ಬಿಎಸ್ ವೈ ಇಂದು ಮತ್ತು ನಾಳೆ ಕೇರಳ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.

ಆದರೆ ಕಣ್ಣೂರಿನಲ್ಲಿ ತೀವ್ರ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಾಳೆ ಕಣ್ಣೂರಿನಿಂದ ಮಂಗಳೂರಿಗೆ ಆಗಮಿಸಬೇಕಿದ್ದ ಯಡಿಯೂರಪ್ಪ ಅವರು ಇಂದು ರಾತ್ರಿ ಮಂಗಳೂರಿಗೆ ಆಗಮಿಸಿ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

Comments are closed.