ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಪಿಐ ಕಚೇರಿಗೆ ಇಂದು ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ನಡೆದಿದೆ. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ ಕೇರಳ ಪ್ರವಾಸದ ವೇಳೆ ಸಿಪಿಐ ಪ್ರತಿಭಟನೆ ನಡೆಸಿತ್ತು. ಪೌರತ್ವ ತಿದ್ದುಪಡಿ ಕಾಯ್ದೆಗೆ ಸಿಪಿಐ ವಿರೋಧ ವ್ಯಕ್ತಪಡಿಸಿತ್ತು. ಇದೇ ಕಾರಣಕ್ಕೆ ಕಚೇರಿಗೆ ಬೆಂಕಿ ಹಾಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನೆಯಲ್ಲಿ ಕಚೇರಿ ಮುಂದೆ ನಿಲ್ಲಿಸಲಾಗಿದ್ದ ಆರು ಬೈಕ್ಗಳು ಬೆಂಕಿಗಾಹುತಿಯಾಗಿವೆ. ಕಚೇರಿ ಬಾಗಿಲಿಗೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ದುಷ್ಕರ್ಮಿಗಳ ಕೃತ್ಯ ವಿರೋಧಿಸಿ ಸಿಪಿಐ ಇಂದು ಮಧ್ಯಾಹ್ನ 1 ಗಂಟೆಗೆ ಮಲ್ಲೇಶ್ವರಂ ಕಚೇರಿ ಬಳಿ ಪ್ರತಿಭಟನೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಘಟನೆ ಕುರಿತು ಡಿಸಿಪಿ ಚೇತನ್ ಸಿಂಗ್ ರಾಥೋರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಪಿಐ ಕಛೇರಿ ಆವರಣದಲ್ಲಿದ್ದ ಆರು ಬೈಕ್ ಗಳಿಗೆ ಬೆಂಕಿ ಇಡಲಾಗಿದೆ. ಪೆಟ್ರೋಲ್ ಹಾಕಿ ಬೆಂಕಿ ಇಟ್ಟಿದ್ದಾರೆ. ಯಾರೋ ದುಷ್ಕರ್ಮಿ ಗಳು ಬೈಕ್ ನಲ್ಲಿ ಬಂದು ತಡರಾತ್ರಿ ಒಂದು ಗಂಟೆ ಸಮಯದಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದರು.
ಸದ್ಯ ದೂರು ಪಡೆದು ನಂತರ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತೇವೆ. ಯಾರು ಯಾವ ಕಾರಣಕ್ಕೆ ಮಾಡಿದ್ದಾರೆ ಎನ್ನುವುದನ್ನು ಪರಿಶೀಲನೆ ನಡೆಸಬೇಕು.ಸದ್ಯ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.
Comments are closed.