ಕರ್ನಾಟಕ

ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ- ಮೋದಿ ಸ್ವಾಗತಕ್ಕೆ ಸಜ್ಜಾದ ತುಮಕೂರು

Pinterest LinkedIn Tumblr


ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಕಿಸಾನ್ ಸಮ್ಮಾನ್ ನಾಲ್ಕನೇ ಹಂತದ ಹಣ ಬಿಡುಗಡೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದು, ಜೊತೆಗೆ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ನಗರದ ಜೂನಿಯರ್ ಕಾಲೇಜು ಮೈದಾನ ಹಾಗೂ ಸಿದ್ದಗಂಗಾ ಮಠದಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾಗಿದೆ.

ಕಿಸಾನ್ ಸಮ್ಮಾನ್ ನಿಧಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದ್ದು, ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಈ ಯೋಜನೆಯ ನಾಲ್ಕನೇ ಹಂತದ ಕಾರ್ಯಕ್ರಮ ನಾಳೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಸುಮಾರು 60-80 ಸಾವಿರ ರೈತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಮೋದಿ ಬಟನ್ ಒತ್ತುವುದರ ಮೂಲಕ ಏಕಕಾಲಕ್ಕೆ 6 ಕೋಟಿ ರೈತ ಕುಟುಂಬಗಳಿಗೆ ನೇರ ನಗದು ವರ್ಗಾವಣೆಯಾಗಲಿದೆ. ಅಲ್ಲದೆ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿವಿಧ ರಾಜ್ಯಗಳ 32 ರೈತರಿಗೆ ‘ಕೃಷಿ ಕರ್ಮಣ್’ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಇದರಲ್ಲಿ 16 ಜನ ರೈತ ಮಹಿಳೆಯರು ಹಾಗೂ 16 ಪುರುಷ ರೈತರು ಇರಲಿದ್ದಾರೆ. ಜೊತೆಗೆ ಮೀನು ಸಾಕಣಿಕಾರರಿಗೆ ಸೌಲಭ್ಯ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೇಂದ್ರ ಕೃಷಿ ಸಚಿವ (ರಾಜ್ಯ) ನರೇಂದ್ರ ಸಿಂಗ್ ತೋಮರ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ಹಲವು ನಾಯಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಧ್ಯಾಹ್ನ 2.10ಕ್ಕೆ ತುಮಕೂರು ವಿಶ್ವವಿದ್ಯಾಲಯದ ಹೆಲಿಪ್ಯಾಡ್‍ಗೆ ಆಗಮಿಸಲಿರುವ ಪ್ರಧಾನಿ ಮೋದಿ, ರಸ್ತೆ ಮಾರ್ಗವಾಗಿ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ. ಅಲ್ಲದೆ ಭೇಟಿಕೊಟ್ಟ ಸ್ಮರಣಾರ್ಥವಾಗಿ ಗದ್ದುಗೆ ಪಕ್ಕದಲ್ಲಿ ಬಿಲ್ವ ಪತ್ರೆ ಗಿಡ ನೆಡಲಿದ್ದಾರೆ. ನಂತರ ಶ್ರೀಗಳ ವಸ್ತು ಸಂಗ್ರಹಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಠದ ಆವರಣದ ವೇದಿಕೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಚುಟುಕಾಗಿ ಮಾತನಾಡಲಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಪ್ರಧಾನಿ ಮೋದಿ ಮಠದಲ್ಲಿ ಇರಲಿದ್ದಾರೆ. ಬಳಿಕ ಮಧ್ಯಾಹ್ನ 3:30ಕ್ಕೆ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಪಿಎಂ ಮೋದಿ ಜೊತೆಗೆ ಸಿಎಂ ಯಡಿಯೂರಪ್ಪ, ಕೇಂದ್ರದ ಸಚಿವರು, ಜಾರ್ಖಂಡ್ ಸಿಎಂ, ಮಣಿಪುರ ಸಿಎಂ, ಉತ್ತರಾಖಂಡ್ ರಾಜ್ಯಪಾಲರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ವೀಕ್ಷಣೆಗೆ ನಗರದ ವಿವಿಧೆಡೆ ಎಲ್.ಇ.ಡಿ ಸ್ಕ್ರೀನ್ ಅಳವಡಿಸಲಾಗುತ್ತಿದೆ. ರಿಂಗ್ ರಸ್ತೆ, ಶಿರಾ ರಸ್ತೆ ಸೇರಿ ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಬರುವ ರೈತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3-30 ರಿಂದ 5 ಗಂಟೆ ವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Comments are closed.