ಕರ್ನಾಟಕ

8 ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ

Pinterest LinkedIn Tumblr


ಹಾವೇರಿ: ತುಂಗಭದ್ರಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ಕಂಚಾರಗಟ್ಟಿ ಗ್ರಾಮದ ಬಳಿ ನಡೆದಿದೆ.

ಮೃತ ದಂಪತಿಯನ್ನು ಪ್ರಕಾಶ್ ನಾಯಕ್ (32) ಮತ್ತು ಭಾರತಿಬಾಯಿ (25) ಎಂದು ಗುರುತಿಸಲಾಗಿದೆ. ಪ್ರಕಾಶ್ ನಾಯಕ್ ಮತ್ತು ಭಾರತಿಬಾಯಿ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇವರು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಮೂಲದ ನಿವಾಸಿಗಳು ಎನ್ನಲಾಗಿದೆ. ಆದರೆ ದಂಪತಿ ಕಳೆದ ಕೆಲವು ದಿನಗಳಿಂದ ಕಬ್ಬು ಕಟಾವು ಮಾಡುವ ಕೆಲಸಕ್ಕಾಗಿ ಹಾವೇರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.

ದಂಪತಿ ಶುಕ್ರವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ನದಿಯಲ್ಲಿ ದಂಪತಿಯ ಮೃತದೇಹ ಪತ್ತೆಯಾದಾಗ ಈ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತೆ ಗುತ್ತಲ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments are closed.