ಕರ್ನಾಟಕ

ಪಾಕ್ ಪರ ಘೋಷಣೆ ಕೂಗಿದ ಯುವತಿಯದು ದೇಶ ದ್ರೋಹದ ಕೆಲಸ: ಕುಮಾರಸ್ವಾಮಿ

Pinterest LinkedIn Tumblr


ರಾಮನಗರ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ಸಿಎಎ ವಿರುದ್ಧದ ಹೋರಾಟದ ವೇದಿಕೆಯಲ್ಲಿ ಅಮೂಲ್ಯ ಲಿಯೋನ್ ಎಂಬ ಯುವತಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದರು.

ರಾಮನಗರದ ಜಾನಪದ ಲೋಕದ ಬಳಿ ಪುತ್ರ ನಿಖಿಲ್ ಮದುವೆಗೆ ನಿಶ್ಚಯವಾಗಿರುವ ಭೂಮಿ ಪೂಜೆಗೆ ಆಗಮಿಸಿದ್ದ ಅವರು ಸುದ್ದಿಗಾರೊಂದಿಗೆ ಮಾತನಾಡಿದರು. ಇಂತಹ ದೇಶದ್ರೋಹಿಗಳ ಬಗ್ಗೆ ಸಂಘಟಕರು ಎಚ್ಚರದಿಂದ ಇರಬೇಕು ಎಂದರು.

ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಆಕೆ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾಳೋ ಇಲ್ಲ ಪ್ರಚಾರಕ್ಕಾಗಿ ಮಾಡಿದ್ದಾಳೋ, ಆಕೆಗೆ ಈ ಬಗ್ಗೆ ತಿಳಿವಳಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಇಂತಹ ದೇಶ ದ್ರೋಹದ ಕೆಲಸ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ಪಕ್ಷದ ಕಾರ್ಯಕರ್ತರಾದ ಇಮ್ರಾನ್, ಯುವತಿ ಘೋಷಣೆ ಕೂಗಿದ ಕೂಡಲೇ ಆಕೆಯ ಮೈಕ್ ಕಸಿದುಕೊಂಡಿದ್ದಾರೆ. ಹೀಗಾಗಿ ಸಂಘಟಕರಿಂದ ಆ ರೀತಿಯ ಪ್ರಯತ್ನ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಮೊದಲು ನಾನು ಭಾರತೀಯ ಎಂಬ ಭಾವನೆ ಇದ್ದಾಗ ಮಾತ್ರ ಹೋರಾಟಕ್ಕೆ ಇತರರು ಕೈಜೋಡಿಸುತ್ತಾರೆ. ಈ ರೀತಿಯ ಅಪಪ್ರಚಾರ ಯಾರಿಗೂ ಬೇಡ ಎಂದರು.

ಬಿಜೆಪಿ ಈ ರೀತಿಯ ಪ್ರಯತ್ನಗಳಿಗೆ ಹೆಚ್ಚು ಪ್ರಚಾರ ಮಾಡುವ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಹೊರಟಿದೆ. ದೇಶಭಕ್ತಿಯ ಬಗ್ಗೆ ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ. ಹೋರಾಟಗಾರರು ತ್ರಿವರ್ಣ ಧ್ವಜ ಹಿಡಿದು ಹೋರಾಟ ನಡೆಸಿದ್ದಾರೆಯೇ ಹೊರತು ಪಾಕಿಸ್ತಾನದ ಧ್ವಜವನ್ನಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಹಾರಿದ್ದ ರಾಷ್ಟ್ರಧ್ವಜಕ್ಕಿಂತ ಹತ್ತು ಪಟ್ಟು ಧ್ವಜಗಳು ಇಂದು ಹೋರಾಟದ ಹೆಸರಿನಲ್ಲಿ ಹಾರುತ್ತಿವೆ. ಸಂವಿಧಾನ ಕೊಟ್ಟ ಹಕ್ಕನ್ನು, ಸಂವಿಧಾನದ ಆಶಯಗಳು ಮತ್ತು ದೇಶವನ್ನು ಯಾರಿಂದಲೂ ಛಿದ್ರಗೊಳಿಸಲು ಆಗದು. ಯಾರೋ ಒಬ್ಬರು ತಿಳಿಗೇಡಿ ಘೋಷಣೆ ಕೂಗಿದ ಮಾತ್ರಕ್ಕೆ ಅದರ ಗಮನವನ್ನು ಬೇರೆ ಕಡೆಗೆ ಸೆಳೆಯುವ ಅವಶ್ಯಕತೆ ಇಲ್ಲ ಎಂದರು.

Comments are closed.