ಕರ್ನಾಟಕ

ಮೇ 3ರ ನಂತರ ಕೈಗಾರಿಕೆಗಳ ಆರಂಭಕ್ಕೆ ಕೇಂದ್ರ ಅನುಮತಿ ಸಾಧ್ಯತೆ: ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು: ಮೇ 3ರ ನಂತರ ಕೇಂದ್ರ ಕೈಗಾರಿಕೆಗಳ ಪುನರಾರಂಭಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ. ಆದ್ದರಿಂದ ಕೈಗಾರಿಕೆಗಳನ್ನು ಪುನರಾರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೈಗಾರಿಕೋದ್ಯಮಿಗಳಿಗೆ ಸಲಹೆ ನೀಡಿದರು.

ಗುರುವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ವಿವಿಧ ವಾಣಿಜ್ಯೋದ್ಯಮಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳ ಅವಧಿಯಲ್ಲಿ ಕೈಗಾರಿಕೋದ್ಯಮಿಗಳೂ ಸಂಕಷ್ಟಕ್ಕೆ ಒಳಗಾಗಿರುವುದು ಸರಕಾರಕ್ಕೆ ಅರಿವಿದೆ. ಆದರೆ, ಕಾರ್ಮಿಕರ ವೇತನವನ್ನು ತಪ್ಪದೆ ಪಾವತಿಸುವಂತೆ ವಾಣಿಜ್ಯೋದ್ಯಮಿಗಳಲ್ಲಿ ಮನವಿ ಮಾಡಿದರು.

ಅಲ್ಲದೆ, ಕಾರ್ಖಾನೆಗಳಲ್ಲಿ ಕಾರ್ಮಿಕರು/ ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸೂಚಿಸಿದರು. ರಾಜ್ಯದಲ್ಲಿ ಈಗಾಗಲೇ ಹಸಿರು ವಲಯಗಳಲ್ಲಿ ಕೈಗಾರಿಕೆ ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.

ಮೇ 3ರ ನಂತರ ಕೇಂದ್ರ ಸರಕಾರದಿಂದ ಬರುವ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗುತ್ತಿದೆ. ಅದರಂತೆ ಮುಂದಿನ ಕ್ರಮಕೈಗೊಳ್ಳಲಾಗುವುದು. ನಿಮ್ಮೆಲ್ಲರ ಸಮಸ್ಯೆಗಳನ್ನು ಸರಕಾರ ಸಹಾನುಭೂತಿಯಿಂದ ಪರಿಶೀಲಿಸಲಿದೆ. ಬೇಡಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಕಾರದ ಇತಿ ಮಿತಿಯಲ್ಲಿ ಸಾಧ್ಯವಾದಷ್ಟು ಸ್ಪಂದಿಸಲಾಗುವುದು ಎಂದು ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು, ಸಲಹೆಗಳನ್ನು ನೀಡಿದ ಉದ್ಯಮಿಗಳು, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಎಫ್‌ಕೆಸಿಸಿಐ, ಸಣ್ಣ ಕೈಗಾರಿಕೆಗಳ ಸಂಘ, ಫಿಕ್ಕಿ, ಸಿಐಐ, ಅವೇಕ್, ಅಸೋಚಾಂ, ಬಿಸಿಐಸಿ, ಮಹಿಳಾ ಉದ್ಯಮಿಗಳ ಒಕ್ಕೂಟ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಇದ್ದರು.

Comments are closed.