ಕರ್ನಾಟಕ

ಎಸ್ಎಲ್‌ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಲು ಸುರೇಶ್​​ ಕುಮಾರ್​​ ಸೂಚನೆ

Pinterest LinkedIn Tumblr


ಬೆಂಗಳೂರು(ಮೇ.04): ಕೊರೋನಾ ಲಾಕ್​​ಡೌನ್​​ನಿಂದಾಗಿ ಸ್ಥಗಿತಗೊಂಡಿದ್ದ ಎಸ್​ಎಸ್​ಎಲ್​​ಸಿ ಪರೀಕ್ಷೆ ನಡೆಸಲು ಬೇಕಾದ ಎಲ್ಲ ಸಿದ್ದತೆಗಳನ್ನು ಈಗಿನಿಂದಲೇ ಪ್ರಾರಂಭಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು ಹೀಗೆ ಆದೇಶಿಸಿದ್ಧಾರೆ.

ಇನ್ನು, ಎಲ್ಲ ಜಿಲ್ಲೆಗಳಿಂದ ಬಂದ ಒಟ್ಟಾಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ ದಿನಾಂಕ ತಿಳಿಯಲು ಉತ್ಸುಕರಾಗಿದ್ದಾರೆ. ತಮ್ಮ ಪರಿಶ್ರಮದ ಆಧಾರದಲ್ಲಿ ಪರೀಕ್ಷಾ ಫಲಿತಾಂಶವನ್ನು ಪಡೆಯಬೇಕೆಂದು ಬಯಸುತ್ತಿದ್ದಾರೆ. ಹೀಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೋನಾ ನಂತರದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವಶ್ಯಕವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. ಈ ಕೂಡಲೇ ಪರೀಕ್ಷೆಗಳನ್ನು ನಿರ್ವಹಿಸುವ ಬಗ್ಗೆ ಗಮನ ಹರಿಸಬೇಕೆಂದು ಸೂಚನೆ ನೀಡಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ಮತ್ತು ಕಂಟೇನ್ ಮೆಂಟ್ ಜಿಲ್ಲೆಗಳೆಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಪರೀಕ್ಷಾ ಸಿದ್ಧತೆ ಕುರಿತು ಅಭಿಪ್ರಾಯ ಸಂಗ್ರಹಿಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿರುವ ಈ ದಿನಮಾನಗಳಲ್ಲಿ ಮಕ್ಕಳ ಮಾನಸಿಕ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪರೀಕ್ಷಾ ಸಿದ್ಧತೆಯನ್ನು ಜಾರಿಯಲ್ಲಿಡಬೇಕೆಂದು ಎಂದು ಸುರೇಶ್​ ಕುಮಾರ್​​ ಹೇಳಿದ್ದಾರೆ.

ಮಾಸ್ಕ್ , ಸ್ಯಾನಿಟೈಜರ್ ಹಾಗೂ ಜ್ವರ ತಪಾಸಣೆ ಕಡ್ಡಾಯ

ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಜರ್ ಗಳನ್ನು ಒದಗಿಸಿ ಥರ್ಮಲ್ ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಲು ಕ್ರಮ ಕೈಗೊಳ್ಳಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡಬೇಕು. ಯಾವುದೇ ವಿದ್ಯಾರ್ಥಿಯೂ ನೆಲದ ಮೇಲಾಗಲೀ, ಬಯಲಿನಲ್ಲಾಗಲೀ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

ಅಗತ್ಯವಾದ ಡೆಸ್ಕ್, ಬೆಂಚ್ ಗಳನ್ನು ಅಸುಪಾಸಿನ ಶಾಲೆಗಳಿಂದ ಸಂಗ್ರಹಿಸಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಪರೀಕ್ಷಾ ವಾತಾವರಣವನ್ನು ಕಲ್ಪಿಸಬೇಕು. ಕಂಟೈನ್ ಮೆಂಟ್ ವಲಯಗಳಲ್ಲಿರುವ ಪರೀಕ್ಷಾ ಕೇಂದ್ರಗಳ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸುವುದು. ಉಪಕೇಂದ್ರಗಳನ್ನು ಸ್ಥಾಪಿಸುವುದು, ಪ್ರತಿ ಪರೀಕ್ಷಾ ಕೊಠಡಿಯಲ್ಲಿ ತಲಾ 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂಡಿಸುವುದು, ಪ್ರತಿ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ, ವೈದ್ಯಕೀಯ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವುದು ಸೇರಿದಂತೆ ಸಮಗ್ರವಾದ ಕ್ರಿಯಾಯೋಜನೆ ತಯಾರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Comments are closed.