ಕರ್ನಾಟಕ

ಸರ್ಕಾರ ಕೈಚೆಲ್ಲಿದೆ; ಜೀವ ರಕ್ಷಣೆಗೆ ಜನತೆಯೇ ಲಾಕ್​ಡೌನ್ ಮಾಡಿಕೊಳ್ಳಬೇಕು: ಕುಮಾರಸ್ವಾಮಿ

Pinterest LinkedIn Tumblr


ಬೆಂಗಳೂರು(ಜೂ.24): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಈ ಮೊದಲು ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿ ಕೊರೋನಾ ನಿಯಂತ್ರಣ ಮಾಡಿದ್ದ ರಾಜ್ಯ ಸರ್ಕಾರ ಆ ನಂತರ ಲಾಕ್ ಡೌನ್ ಸಡಿಲಿಕೆ ಮಾಡಿ ಕೊರೋನಾ ಹೆಚ್ಚಳಕ್ಕೆ ಕಾರಣವಾಗಿದೆ. ಇದೀಗ ರಾಜ್ಯ ಸರ್ಕಾರದ ನಡೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಈಗಾಗಲೇ ಬೆಂಗಳೂರಲ್ಲಿ ಲಾಕ್ ಡೌನ್ ಮಾಡುವಂತೆ ಒತ್ತಾಯಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಇವತ್ತು ಸ್ವತಃ ಜನರೇ ಲಾಕ್ ಡೌನ್ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕುಟುಂಬದ ನಾಲ್ಕು ಜನರಿಗೆ ಕೊರೋನಾ ಬಂದರೆ,15 ದಿನಗಳ ಚಿಕಿತ್ಸೆಗೆ ಸರ್ಕಾರ ನಿಗಧಿ ಪಡಿಸಿರುವ ದರದ ಪ್ರಕಾರ 5 ರಿಂದ 6 ಲಕ್ಷ ರೂಪಾಯಿ ಬೇಕು. ಹೀಗಾಗಿ ಇಷ್ಟೊಂದು ದುಡ್ಡನ್ನು ಬಡವರು, ಮಧ್ಯಮ ವರ್ಗದವರು ಎಲ್ಲಿಂದ ತರುತ್ತಾರೆ. ಸರ್ಕಾರ ಕೈ ಚೆಲ್ಲಿ ಕುಳಿತಿರುವಾಗ ನಮ್ಮ ಜೀವನವನ್ನು ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಎಲ್ಲರೂ ಎಚ್ಚರ ದಿಂದ ಇರಿ ಎಂದು ರಾಜ್ಯದ ಜನರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈಗಿರುವ ಮೂರು ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ ಗಳಿಲ್ಲ. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಕೊರತೆ ಇದೆ. ಇಂತಹ ಸಂದರ್ಭಗಳಲ್ಲಿ ನಮ್ಮ ಜೀವವನ್ನು ಉಳಿಸಿಕೊಳ್ಳಬೇಕಾದ್ರೆ ಒಂದೇ ಪರಿಹಾರ, ಸ್ವಯಂ ಪ್ರೇರಿತ ಲಾಕ್ ಡೌನ್ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ರಾಜ್ಯ ಸರ್ಕಾರ ಕೂಡ ಇದನ್ನೇ ಪರೋಕ್ಷವಾಗಿ ಹೇಳುತ್ತಿದೆ. ಕೊರೋನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ ‘ಮನೆ ಮದ್ದು’. ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ 10-15 ಸಾವಿರ ರೂ. ಈ ದರ ಬಡವರಿಗಿರಲಿ, ಮೇಲ್ಮಧ್ಯಮವರ್ಗದವರಿಗೂ ಭರಿಸಲು ಸಾಧ್ಯವಾಗದು.

ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳು, ತಾವು ಕೋವಿಡ್ ನಿಂದ ಪಾರಾಗಲು ಮನೆಯಲ್ಲೇ ಸ್ವಯಂ ಪ್ರೇರಿತರಾಗಿ ಮನೆಯಲ್ಲೇ ಉಳಿದು ಸ್ವಯಂ ಬಂದ್ ಆಚರಿಸಬೇಕು. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ. ಜೀವ ಇದ್ದರೆ ಹೇಗಾದರೂ ಬದುಕಬಹುದು.

ಹೀಗಾಗಿ ನಿಮ್ಮ ಜೀವನ ಈಗ ನಿಮ್ಮ ಕೈಯಲ್ಲಿದೆ, ಈ ಮಾತನ್ನು ರಾಜ್ಯ ಸರ್ಕಾರ ಪರೋಕ್ಷವಾಗಿ ಹೇಳುತ್ತಿದೆ. ಕೊರೋನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿ ಇರುವುದೇ ಮನೆ ಮದ್ದು ಎಂದು ಜನರಿಗೆ ಸಲಹೆ ನೀಡಿದ್ದಾರೆ..

Comments are closed.