ಕರ್ನಾಟಕ

ಮುಂದಿನ 2 ದಿನ ಕರಾವಳಿ, ಮಲೆನಾಡಿನಲ್ಲಿ ‘ಮಹಾ ಮಳೆ’…!

Pinterest LinkedIn Tumblr


ರಾಜ್ಯದ ಕರಾವಳಿ ಹಾಗೂ ಮಲೆನಾಡಿಗೆ ಮಳೆಯ ಕಾಟ ಸದ್ಯಕ್ಕೆ ಬಿಡುವ ಲಕ್ಷಣಗಳೇ ಕಂಡುಬರ್ತಿಲ್ಲ. ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆಯ ಕರೆಗಂಟೆ ಮೊಳಗಿಸಿದೆ.

ರಾಜ್ಯದ ಕರಾವಳಿ, ಘಟ್ಟ ಪ್ರದೇಶಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಷ್ಟೇ ಅಲ್ಲ, ಮಧ್ಯ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಪ್ರಾಕೃತಿಕ ವಿಪತ್ತು ನಿರ್ವಹಣಾ ಕೇಂದ್ರ ಕೂಡಾ ಎಚ್ಚರಿಕೆ ನೀಡಿದೆ.

ಇತ್ತ, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ಕಲಬುರಗಿ ಜಿಲ್ಲೆಯ ಸೊನ್ನಾ ಬ್ಯಾರೇಜ್‌ನಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದೆ. ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

Comments are closed.