ಕರ್ನಾಟಕ

ಮಂಡ್ಯದಲ್ಲಿ ಮೂವರು ಅರ್ಚಕರ ಕೊಲೆ ಪ್ರಕರಣ: ಫೈರಿಗ್ ನಡೆಸಿ ಮೂವರು ಆರೋಪಿಗಳ ಬಂಧನ

Pinterest LinkedIn Tumblr

ಮಂಡ್ಯ: ಮಂಡ್ಯದ ಶ್ರೀ ಅರ್ಕೇಶ್ವರ ಸ್ವಾಮಿ ದೇವಾಲಯದಲ್ಲಿನ ಅರ್ಚಕ ಹಾಗೂ ಕಾವಲುಗಾರರ ಹತ್ಯೆ ಮಾಡಿದ್ದ ಪ್ರಕರಣದ ಆರೋಪಿಗಳನ್ನು ಮಂಡ್ಯ ಪೊಲೀಸರು ಫೈರಿಂಗ್ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶ ಮೂಲದ ವಿಜಿ, ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಎನ್ನುವರು ಬಂಧಿತ ಆರೋಪಿಗಳು. ಬಂಧನದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ಮತ್ತು ಚಾಕುಗಳಿಂದ ಹಲ್ಲೆ ನಡೆಸಲು ಮುಂದಾದಾಗ ಆತ್ಮರಕ್ಷಣೆಗೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ. ಮಹೇಶ್ ಹಾಗೂ ಪೂರ್ವ ಪೊಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿತ್ತು. ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ಆರೋಪಿಗಳು ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆದಿದೆ. ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ 3 ಆರೋಪಿಗಳನ್ನು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಯಚರಣೆ ವೇಳೆ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್, ಕೃಷ್ಣ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮದ್ದೂರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿ ಕಾರ್ಯಾಚರಣೆ ಕೈಗೊಂಡ ಪೊಲೀಸ್‌ ತಂಡವನ್ನು ಪ್ರಶಂಶಿಸಿದರು.

Comments are closed.