ಕರ್ನಾಟಕ

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ

Pinterest LinkedIn Tumblr


ಬೆಂಗಳೂರು: ಕಳೆದೊಂದು ವಾರದಿಂದ ಮಳೆ ಕೊಂಚ ಬಿಡುವು ಪಡೆದಿತ್ತು. ಇದೀಗ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ನಾಳೆಯೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರದ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೋರು ಮಳೆಯಾಗುತ್ತಿದೆ. ನಗರದ ಮೆಜೆಸ್ಟಿಕ್, ಮತ್ತಿಕೆರೆ, ಯಶವಂತಪುರ, ಮಲ್ಲೇಶ್ವರಂ, ಹೆಬ್ಬಾಳ, ಸಂಪಿಗೆಹಳ್ಳಿ, ಯಲಹಂಕ, ಬ್ಯಾಟರಾಯನಪುರ, ಬಿಇಎಲ್, ಜಯನಗರ, ಬಸವನಗುಡಿ, ಮಾರ್ಕೆಟ್​ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

ಇಂದು ಮಧ್ಯಾಹ್ನದಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಈಗ ಸಂಜೆಯಾಗುತ್ತಿದ್ದಂತೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಭಾರೀ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ನಗರದ ಹಲವು ಕಡೆಗಳಲ್ಲಿ ಮರಗಳು ನೆಲಕ್ಕುರುಳಿವೆ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್‌ ಕೂಡಾ ಉಂಟಾಗಿದೆ. ನಗರದ ಪ್ರಮುಖ ಸ್ಲಂಗಳಿಗೆ ನೀರು ನುಗಿದ್ದ ಪರಿಣಾಮ ಮನೆಗಳು ಸಂಪೂರ್ಣ ಜಲಾವೃತಗೊಂಡಿದೆ.

ಮಲೆನಾಡು, ಕರಾವಳಿ, ಕೊಡಗು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇನ್ನೂ ಒಂದಷ್ಟು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್​ ಘೋಷಿಸಿದೆ.

Comments are closed.