ಕರ್ನಾಟಕ

ಸದ್ಯ ಶಾಲಾ-ಕಾಲೇಜು ಆರಂಭ ಮಾಡುವುದಿಲ್ಲ; ಜಿಲ್ಲಾಧಿಕಾರಿ ಸಭೆಯಲ್ಲಿ ಮುಖ್ಯಮಂತ್ರಿ​ ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು: ಜಿಲ್ಲಾಧಿಕಾರಿ ಸಭೆಯಲ್ಲಿ ಶಾಲೆಗಳನ್ನು ಸದ್ಯ ಶಾಲಾ-ಕಾಲೇಜು ಆರಂಭ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ತೀರ್ಮಾನ ಮಾಡಬೇಕು. ಶಾಲೆ ತೆರೆಯಲು ಪೋಷಕರ ಒಪ್ಪಿಗೆಬೇಕು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನಲೆ ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಶಾಲೆಗಳನ್ನು ಆರಂಭಿಸಬೇಕಾ, ಬೇಡವಾ ಎಂಬ ಕುರಿತು ಇಂದು ಹತ್ತು ಜಿಲ್ಲೆಯ ಜಿಲ್ಲಾಧಿಕಾರಿ, ಎಸ್​ಪಿ, ಆರೋಗ್ಯಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು. ಈ ಸಭೆ ಬಳಿಕ ಮಾತನಾಡಿದ ಅವರು, ಶಾಲೆ ಆರಂಭಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆ ಸಭೆಯಲ್ಲಿ ಈ ಕುರಿತು ಚರ್ಚಿಸಿಲ್ಲ. ಶಾಲೆ ಪ್ರಾರಂಭದ ಕುರಿತು ತಜ್ಞರ ವರದಿ ಕೋರಲಾಗಿದೆ. ಈ ವರದಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಅವರು, ಕೋವಿಡ್​ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದೇನೆ. ಕೊರೋನಾ ಅತಿ ಹೆಚ್ಚಿರುವ ಜಿಲ್ಲೆಯಲ್ಲಿ ಯಾವ ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಮಾತುಕತೆ ನಡೆಸಿದ್ದೇವೆ. ಕೊರೊನಾ ಸ್ಥಿತಿ ಬಗ್ಗೆ ವರದಿ ನೀಡಲು ಸೂಚಿಸಿದ್ದು, ಪರಿಸ್ಥಿತಿ ನೋಡಿಕೊಂಡು ಮುಂದಿನ ನಡೆ ಕುರಿತು ತೀರ್ಮಾನ ಮಾಡುತ್ತೇವೆ.

ಮುಖ್ಯಮಂತ್ರಿ @bsybjp ರವರ ಅಧ್ಯಕ್ಷತೆಯಲ್ಲಿ ಇಂದು, ಕೋವಿಡ್-19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ರಾಜ್ಯದ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಜರುಗಿತು. (1/2) pic.twitter.com/g6JxDIkN7y

ಕೊರೋನಾ ಸೋಂಕು ಹೆಚ್ಚಿರುವ 10 ಜಿಲ್ಲೆಗಳಲ್ಲಿ ತುಮಕೂರು, ಮೈಸೂರು, ಧಾರವಾಡ ಬಿಟ್ಟು ಉಳಿದೆಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಸಾವಿನ ಪ್ರಮಾಣ ಶೇ 1ಕ್ಕೆ ಇಳಿಸಲು ಸೂಚಿಸಲಾಗಿದೆ. ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಪ್ರಧಾನಿಗಳು ಕೂಡ ಸಾವಿನ ಪ್ರಮಾಣ ಕಡಿಮೆಗೆ ಸೂಚನೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿರುವ ಅಂಶಗಳು ಇಂತಿವೆ

ಕೊವೀಡ್ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಿ.
ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ
ಅವರ ಪರೀಕ್ಷೆಗಳನ್ನು ಮಾಡಿ ಸೂಕ್ತ ಚಿಕಿತ್ಸೆ ನೀಡಿ
ಈ ಮೂಲಕ ಸಾಂಕ್ರಾಮಿಕ ರೋಗ ತಡೆ ಹಾಗೂ ಸಾವಿನ ಪ್ರಮಾಣ ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಿ.
ಮಾಸ್ಕ್ ಧರಿಕೆ, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜ್ ಬಗ್ಗೆ ಅರಿವು ಮೂಡಿಸಿ
ಮಾಸ್ಕ್ ಹಾಕದವರಿಗೆ ದಂಡ ವಿಧಿಸುವುದು ಅರಿವಿನ ಒಂದು ಭಾಗ ಆಗಬೇಕು
ಮಾಸ್ಕ ದಂಡದ ಕುರಿತು ಸರ್ಕಾರಕ್ಕೆ ಬೇರೆ ಉದ್ದೇಶ ಇಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.
ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಸರ್ಕಾರ ಬದ್ಧವಾಗಿದೆ
ಕೋವಿಡ್ 19 ಸಂಬಂಧಿಸಿದ ಎಸ್.ಒ.ಪಿಗಳನ್ನು ಪಾಲಿಸಿ
ಮರಣ ಪ್ರಮಾಣ ಹೆಚ್ಚದಂತೆ ಕಾಳಜಿ ನಿಗಾ ವಹಿಸಿ.

ಧಾರವಾಡಕ್ಕೆ ವಿಶೇಷ ತಂಡ
ಧಾರವಾಡ ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಳವಾದ ಹಿನ್ನಲೆ ಅಲ್ಲಿಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಅಲ್ಲಿ ಆಗಿರುವ ತಪ್ಪುಗಳನ್ನು ತಿದ್ದುಕೊಳ್ಳುವ ಕಾರ್ಯ ನಡೆಯಲಿದೆ. ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಮತ್ತು ಮರಣ ಪ್ರಮಾಣಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಲಾಗಿದೆ. ಮನೆ ಆರೈಕೆಯಲ್ಲಿರುವವರಿಗೆ ಟೆಲಿ ಮಾನಿಟರಿಂಗ್ ಮಾಡಬೇಕು. ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ಮಾಡಬೇಕು. ಅವರಿಗೆ ಆರೋಗ್ಯ ಕಿಟ್‍ಗಳನ್ನು ನೀಡಬೇಕು. ಪಾಸಿಟಿವ್ ಪ್ರಕರಣಗಳನ್ನು ಕಡಿಮೆ ಮಾಡಲು ಸಮೀಕ್ಷೆ ಮಾಡಿ ತಪಾಸಣೆ ಕೈಗೊಳ್ಳಿ ಎಂದು ಸೂಚನೆ ನೀಡಲಾಗಿದೆ ಎಂದರು.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್​, ಕಂದಾಯ ಸಭೆ ಆರ್​ ಅಶೋಕ್​, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್​, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.