ಕರ್ನಾಟಕ

ರಾಜ್ಯದ ಬಹುತೇಕ ಕಡೆ ಇನ್ನೆರಡು ದಿನ ಮಳೆ ಸಾಧ್ಯತೆ

Pinterest LinkedIn Tumblr


ಬೆಂಗಳೂರು: ರಾಜ್ಯದ ಬಹುತೇಕ ಕಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದು ಮತ್ತು ನಾಳೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಅ. 14ರವರೆಗೂ ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ಮಳೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದ ಉತ್ತರ ಒಳನಾಡಿನಲ್ಲೂ ಇಂದು, ನಾಳೆ ಮಳೆಯಾಗುವ ಸಂಭವವಿದೆ. ಬೀದರ್, ಕಲಬುರ್ಗಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ‌ಇದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಗೇ ಬೆಂಗಳೂರಿನಲ್ಲಿಯೂ ಇನ್ನೆರಡು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಅ.15ರವರೆಗೆ 204 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ಮಹಾರಾಷ್ಟ್ರದಲ್ಲಿಯೂ ಮಳೆ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ, ತುಮಕೂರು, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರದಲ್ಲಿ ಇಂದು ಹಳದಿ ಅಲರ್ಟ್​ ಹಾಗೂ ಅ.14ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇವುಗಳಲ್ಲಿ ಆಯ್ದ ಜಿಲ್ಲೆಗಳಲ್ಲಿ ಅ.15ಕ್ಕೂ ಯಲ್ಲೋ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಹಾಗೂ ಯಾದಗಿರಿಯಲ್ಲಿ ಇಂದು ಆರೆಂಜ್ ಹಾಗೂ ಅ.14ಕ್ಕೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಗದಗ, ಬಳ್ಳಾಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹೈದರಾಬಾದ್​ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.

Comments are closed.