
ಬೆಂಗಳೂರು: ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ…ನೆರೆಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವುದರಿಂದ ಕರ್ನಾಟಕದ ಬಹುತೇಕ ಕಡೆ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳು, ಕೊಡಗು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದು ಕೂಡ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿಯೂ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿಯೂ ಇಂದು ಮಳೆ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಇಂದು 204 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಇಂದು ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೈದರಾಬಾದ್ ಕರ್ನಾಟಕದಲ್ಲಿ ಕೂಡ ಮಳೆಯ ಅಬ್ಬರ ಹೆಚ್ಚಾಗಲಿದೆ. ವಿಜಯಪುರದಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಜಯಪುರ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗಳೂರು ಸುತ್ತಮುತ್ತ, ಬೆಳ್ತಂಗಡಿ, ಸುಳ್ಯ, ಪುತ್ತೂರು ಭಾಗದಲ್ಲಿ ಭಾರೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ ಕೊನೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಉತ್ತರ ಕರ್ನಾಟಕದಲ್ಲಿ ಸುರಿದ ಮಳೆಯಿಂದ ನಿನ್ನೆ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿಯಲ್ಲಿ ನಿನ್ನೆ ಸುರಿದ ಮಳೆಗೆ ಓರ್ವ ವ್ಯಕ್ತಿ ಭೀಮಾ ನದಿಯಲ್ಲಿ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಮನೆಯ ಗೋಡೆ ಕುಸಿದು ರೋಣ ತಾಲೂಕಿನ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ವಿಜಯಪುರದಲ್ಲೂ ವಿಪರೀತ ಮಳೆಯಾಗಿದ್ದು, ರಸ್ತೆಗಳು, ಮನೆಗಳು ಜಲಾವೃತವಾಗಿವೆ.
ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ಮಹಾರಾಷ್ಟ್ರದಲ್ಲಿಯೂ ಮಳೆ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ, ತುಮಕೂರು, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಗದಗ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
Comments are closed.