ಕರ್ನಾಟಕ

ಐಎಂಎ ಕಂಪೆನಿ ಬಹುಕೋಟಿ ವಂಚನೆ ಪ್ರಕರಣ; ಮಾಜಿ ಸಚಿವ ಆರ್.ರೋಷನ್ ಬೇಗ್’ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Pinterest LinkedIn Tumblr

ಬೆಂಗಳೂರು: ಐಎಂಎ ಕಂಪೆನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧಿಸಿ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರನ್ನು ಸಿಬಿಐ ಇಂದು ಬಂಧಿಸಿದೆ.

ರೋಷನ್‌ ಬೇಗ್‌ ಅವರನ್ನು ಬಂಧಿಸಿದ ಸಿಬಿಐ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈಗ ರೋಷನ್‌ ಬೇಗ್‌ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ.

ಈ ಹಿಂದೆ ಸಿಬಿಐ ಎರಡು ಬಾರಿ ನೋಟಿಸ್‌ ನೀಡಿ ರೋಷನ್‌ ಬೇಗ್‌ ಅವರನ್ನು ವಿಚಾರಣೆ ನಡೆಸಿತ್ತು. ಬಳಿಕ ಯಾವುದೇ ವಿಚಾರಣೆ ನಡೆಸಿರಲಿಲ್ಲ.

ಐಎಂಎಯಿಂದ ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿಬಂದಿತ್ತು. ಐಎಂಎ ಅಧ್ಯಕ್ಷ ಮನ್ಸೂರ್ ಖಾನ್ ನಿಂದ ನೂರಾರು ಕೋಟಿ ರೂಪಾಯಿಯನ್ನು ರೋಷನ್ ಬೇಗ್ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ಹಣವಷ್ಟೇ ಅಲ್ಲ, ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.

ಈ ಪ್ರಕರಣದಲ್ಲಿ ತಮ್ಮ ಮೇಲೆ ಆರೋಪ ಬಂದ ಕೂಡಲೇ ಕಾಂಗ್ರೆಸ್ ಪಕ್ಷ ಹಾಗೂ ಶಿವಾಜಿನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಷನ್ ಬೇಗ್, ಬಿಜೆಪಿ ಸೇರ್ಪಡೆಯಾಗಲು ಮುಂದಾಗಿದ್ದರು. ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳುವ ಕಾರಣಕ್ಕಾಗಿಯೇ ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎಂಬ ಆರೋಪ ಕೂಡಾ ಕೇಳಿಬಂದಿತ್ತು.

ಆದರೆ, ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು.

Comments are closed.