ಚಿಕ್ಕಬಳ್ಳಾಪುರ: ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಜಿಲೆಟಿನ್ ಸ್ಫೋಟ ನಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್ ಸಂಗ್ರಹಿಸಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಉಮಾಕಾಂತ್, ಗಂಗಾಧರ್, ಮುರುಳಿ, ಮಹೇಶ, ಅಭಿ ಹಾಗೂ ಸ್ಥಳೀಯ ನಿವಾಸಿಯಾದ ರಾಮು ಸ್ಫೋಟದಲ್ಲಿ ಸಾವನ್ನಪ್ಪಿದ ದುರ್ದೈವಿಗಳು.
(ಸಾಂದರ್ಭಿಕ ಚಿತ್ರ)
ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ನೀಡಿದ್ದಾರೆ.