ಕರ್ನಾಟಕ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ; ಯಾವುದೇ ರೀತಿಯ ಲಾಕ್ ಡೌನ್ ಇಲ್ಲ, ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ರೂಪಾಂತರಿ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ, ಆರೋಗ್ಯ, ಶಿಕ್ಷಣ ಸಚಿವರು ಹಾಗೂ ಇಲಾಖಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇಲ್ಲ. ನೈಟ್ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ. ಆದರೆ ನಾಳೆಯಿಂದ 15 ದಿನ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇಲ್ಲ ಎಂದರು.

ಲಾಕ್ ಡೌನ್ ಬದಲಿಗೆ ರಾಜ್ಯದಲ್ಲಿ ಕೋವಿಡ್ ನಿರ್ಬಂಧಿಸಲು ಒಂದಷ್ಟು ಕಠಿಣ ನಿಯಮಗಳು ಜಾರಿಗೆ ತರಲಾಗುತ್ತಿದೆ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು. ಅಪಾರ್ಟ್ ಮೆಂಟ್ ಗಳಲ್ಲಿ ಪಾರ್ಟಿ, ಜಿಮ್ ಮತ್ತು ಈಜುಕೋಳಗಳನ್ನು ನಿಷೇಧಿಲಾಗಿದೆ ಎಂದು ಸಿಎಂ ಹೇಳಿದರು.

ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದಾರೆ.

ಇನ್ನು ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಹಿತದೃಷ್ಟಿಯಿಂದ ಬರೆದಿದ್ದ ಪತ್ರವನ್ನು ಓದಿದ ಸಿಎಂ ಯಡಿಯೂರಪ್ಪ, ಜನರನ್ನು ಭಯ ಪಡಿಸದೇ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮಾಸ್ಕ್, ಸಾನಿಟೈಸರ್ ಮತ್ತು ಲಸಿಕೆ ಹೆಚ್ಚಳ ಮಾಡುವ ಬಗ್ಗೆ ಸಲಹೆ ನೀಡಿದ್ದು, ಅದನ್ನು ಸಹ ನಿಮ್ಮ ಗಮನಕ್ಕೆ ತಂದಿದ್ದೇನೆ ಎಂದರು.

Comments are closed.