ಮುಂಬೈ

ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮಾತುಕತೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಕಾಂಗ್ರೆಸ್ ನಾಯಕರ ಭೇಟಿ ಬಳಿಕ ಉದ್ಧವ್ ಠಾಕ್ರೆ

Pinterest LinkedIn Tumblr


ಮುಂಬೈ: ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹಾ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮಾತುಕತೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಬುಧವಾರ ಹೇಳಿದ್ದಾರೆ.

ಇಂದು ಕಾಂಗ್ರೆಸ್ ಹಿರಿಯ ನಾಯಕರಾದ ಅಶೋಕ್ ಚವಾಣ್, ಬಾಳ ಸಾಹೇಬ್ ತೋರಟ್ ಹಾಗೂ ಮಾಣಿಕ್ ರಾವ್ ಥಾಕರೆ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉದ್ಧವ್ ಠಾಕ್ರೆ, ಎಲ್ಲವೂ ಸುಗಮವಾಗಿ ಸಾಗುತ್ತಿದೆ. ಮಾತುಕತೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸುತ್ತೇವೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿದ ಮಾರನೇ ದಿನವೇ ಶಿವಸೇನಾ ಹಾಗೂ ಕಾಂಗ್ರೆಸ್ ನಾಯಕರು ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ್ದು, ಮುಂದಿನ ನಡೆ ಬಗ್ಗೆ ಚರ್ಚಿಸಿದ್ದಾರೆ.

ಕಳೆದ ರಾತ್ರಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಜೊತೆ ಸೇರಿ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸೂತ್ರದ ಪ್ರಕಾರ, ಶಿವಸೇನೆ ಮತ್ತು ಎನ್ ಸಿಪಿ ತಲಾ ಎರಡೂವರೆ ವರ್ಷಗಳ ಕಾಲ ಅಧಿಕಾರ ಹಂಚಿಕೊಂಡು ಕಾಂಗ್ರೆಸ್ ಗೆ 5 ವರ್ಷ ಉಪ ಮುಖ್ಯಮಂತ್ರಿ ಹುದ್ದೆ ನೀಡುವುದು ಎಂದಾಗಿದೆ.

Comments are closed.