ಮುಂಬೈ: ವಿವಾದಿತ 2002ರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿರುವ ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಹೊಸ ವರದಿಯ ಪ್ರಕಾರ, ಸಲ್ಮಾನ್ ಖುಲಾಸೆ ತೀರ್ಪಿನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆಯಂತೆ.
2002ರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿರುವ ತೀರ್ಪು ತಪ್ಪಿನಿಂದ ಕೂಡಿದ್ದು, ಖಾನ್ ವಿರುದ್ಧದ ಆರೋಪ ಸಾಬೀತುಪಡಿಸಲು ಬಲವಾದ ಸಾಕ್ಷ್ಯಗಳಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದ ಬಾಂಬೆ ಹೈಕೋರ್ಟ್ ನಟ ಸಲ್ಮಾನ್ ಖಾನ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಸಿ ಇತ್ತೀಚೆಗಷ್ಟೇ ತೀರ್ಪು ನೀಡಿತ್ತು.
ಬಾಂದ್ರಾದಲ್ಲಿರುವ ಬೇಕರಿ ಹೊರಗಿನ ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ 2002ರ ಸೆಪ್ಟೆಂಬರ್ 28ರಂದು ಸಲ್ಮಾನ್ ಖಾನ್ ಟೋಯೊಟಾ ಲ್ಯಾಂಡ್ ಕ್ರೂಸೆರ್ ಕಾರು ಹರಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿ, ಐದು ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಅದೇ ದಿನ ಹೈಕೋರ್ಟ್ ಖಾನ್ ಗೆ ಜಾಮೀನು ನೀಡಿತ್ತು. ಬಳಿಕ ಕೆಳ ಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
-ಉದಯವಾಣಿ