ಆರೋಗ್ಯ

ಕುಂದಾಪುರ ಸಾರ್ವಜನಿಕ ಆಸ್ಪತ್ರೆ, ಕೊಲ್ಲೂರು ಲಲಿತಾಂಬಿಕಾ ಗೆಸ್ಟ್ ಹೌಸ್ ಇನ್ನು ಕೋವಿಡ್ ಆಸ್ಪತ್ರೆ: ಡಿಸಿ ಜಗದೀಶ್ (Video)

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 3000 ಕೊರೋನ ಪರೀಕ್ಷಾ ವರದಿಗಳು ಬಂದಿದ್ದು, ಅದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳಿವೆ. ಈ ನಿಟ್ಟಿನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕುಂದಾಪುರ ಮತ್ತು ಬೈಂದೂರಿನಲ್ಲಿ 400 ಬೆಡ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಕುಂದಾಪುರ ಮತ್ತು ಬೈಂದೂರಿನಲ್ಲಿ ಕೋವಿಡ್ ಚಿಕಿತ್ಸೆಗಾಗಿ ಬೆಡ್ಗಳ ಸಂಖ್ಯೆ ಹೆಚ್ಚಿಸುವ ಕುರಿತು ಇಂದು ಕುಂದಾಪುರದಲ್ಲಿ ಶಾಸಕರು, ವೈದ್ಯಾಧಿಕಾರಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮದರವರಿಗೆ ಈ ಬಗ್ಗೆ ಮಾಹಿತಿ ನೀಡಿದರು.

ಈಗಾಗಲೇ ಕುಂದಾಪುರ ಸರಕಾರಿ ಕೋವಿಡ್ ಆಸ್ಪತ್ರೆಯಲ್ಲಿ 120 ಬೆಡ್ ಗಳಿದ್ದು, ಹಳೆಯ ಕಟ್ಟಡದಲ್ಲಿರುವ 80ಬೆಡ್ಗಳನ್ನು ಕೂಡ ಕೋವಿಡ್ ಚಿಕಿತ್ಸೆಗೆ ಮೀಸಲಿರಿಸಾಗುವುದು. ಈ ಮೂಲಕ ಇಡೀ ಸರಕಾರಿ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗುತ್ತದೆ. ಅಲ್ಲದೆ ಆದರ್ಶ ಆಸ್ಪತ್ರೆಯಲ್ಲಿ 65 ಬೆಡ್ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಬೈಂದೂರು ತಾಲೂಕಿಗೆ 2500 ಮಂದಿ ಮಹಾರಾಷ್ಟ್ರದಿಂದ ಬಂದಿರುವುದಿಂದ ಅಲ್ಲಿಯೂ ಕೂಡ ಸಾಕಷ್ಟು ಪ್ರಕರಣಗಳು ಕಂಡುಬರುತ್ತಿವೆ. ಆ ನಿಟ್ಟಿನಲ್ಲಿ ತಲ್ಲೂರುನಲ್ಲಿರುವ ಲಲಿತಾಂಬಿಕಾ ಗೆಸ್ಟ್ ಹೌಸ್ ಅನ್ನು 200 ಬೆಡ್ ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ತೀರ್ಮಾನಿಸಲಾಗಿದೆ. ಕುಂದಾ ಪುರ ಮತ್ತು ಬೈಂದೂರಿನಲ್ಲಿ ಯಾವುದೇ ಲಕ್ಷ್ಮಣಗಳಿಲ್ಲದ ಪಾಸಿಟಿವ್ ಪ್ರಕರಣ ಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದು. ಲಕ್ಷ್ಮಣಗಳಿರುವವರು, ಗರ್ಭಿಣಿ ಯರು ಮತ್ತು ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರನ್ನು ಉಡುಪಿ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಲಾಗುವುದು ಎಂದು ಅವರು ಹೇಳಿದರು.
ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿರುವುದರಿಂದ ಇಲ್ಲಿರುವ ಗರ್ಭಿಣಿ ಮತ್ತು ಬಾಣಂತಿಯರನ್ನು ಕೋಟ ಮತ್ತು ಬ್ರಹ್ಮಾವರ ಸಮುದಾಯ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಇತರ ಕಾಯಿಲೆಯ ಒಳರೋಗಿಗಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗು ವುದು. ಹೊರರೋಗಿಗಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುಂದಾ ಪುರ ಸಹಾಯಕ ಆಯುಕ್ತ ಕೆ.ರಾಜು, ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾ ಧಿಕಾರಿ ಡಾ.ರಾಬರ್ಟ್ ರೆಬೆಲ್ಲೊ, ತಾಲೂರು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ವೈದ್ಯರಾದ ಡಾ.ನಾಗೇಶ್, ಡಾ.ಲತಾ, ಡಾ.ಸನ್ಮಾನ್ ಶೆಟ್ಟಿ, ಪ್ರಭಾರಿ ಶುಶ್ರೂಷ ಅಧೀಕ್ಷಕಿ ಆಶಾ ಉಪಸ್ಥಿತರಿದ್ದರು.

(ವರದಿ- ಯೋಗೀಶ್ ಕುಂಭಾಸಿ)

Comments are closed.