ಆರೋಗ್ಯ

ದ.ಕ.ಜಿಲ್ಲೆಯಲ್ಲಿಂದು ಕೊರೊನಾಗೆ 1 ಬಲಿ – 8 ಮಂದಿಗೆ ಸೋಂಕು ದೃಢ : ರಾಜ್ಯದಲ್ಲಿ 322 ಮಂದಿಯಲ್ಲಿ ಕೊರೊನಾ ಪತ್ತೆ

Pinterest LinkedIn Tumblr

ಮಂಗಳೂರು, ಜೂನ್. 23 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ, ಜೊತೆಗೆ ಜಿಲ್ಲೆಯಲ್ಲಿ ಇಂದು ಮತ್ತೆ 8 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 322 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಸೋಮವಾರ ಒಂದೇ ದಿನ 322 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 8 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 453ಕ್ಕೆ ಏರಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 107, ಬಳ್ಳಾರಿ 53, ಬೀದರ್ 22, ಮೈಸೂರು 21, ವಿಜಯಪುರ 16, ಯಾದಗಿರಿ 13, ಉಡುಪಿ 11, ಗದಗ 9, ದಕ್ಷಿಣ ಕನ್ನಡ 8, ಕೋಲಾರ 8, ಹಾಸನ 7, ಕಲಬುರಗಿ 6, ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ತಲಾ 5, ಧಾರವಾಡ, ಕೊಪ್ಪಳ, ಚಾಮರಾಜನಗರ ಮತ್ತು ತುಮಕೂರಿನಲ್ಲಿ ತಲಾ 4, ರಾಯಚೂರು ಮತ್ತು ಉತ್ತರ ಕನ್ನಡ ತಲಾ 3, ಮಂಡ್ಯ, ಬೆಳಗಾವಿ, ದಾವಣಗೆರೆ ಮತ್ತು ಹಾವೇರಿಯಲ್ಲಿ ತಲಾ 2 ಮತ್ತು ಕೊಡಗು ಜಿಲ್ಲೆಯಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ.

ದ.ಕ.ಜಿಲ್ಲೆಯಲ್ಲಿ ಕೊರೊನಾಗೆ 1 ಬಲಿ : ಸಾವಿನ ಸಂಖ್ಯೆ 9ಕ್ಕೇ ಏರಿಕೆ

ದ.ಕದಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ವೃದ್ದ ಜೂನ್‌‌ 7ರಂದು ಬೆಂಗಳೂರಿನಿಂದ ಆಗಮಿಸಿದ್ದರು. ತೀವ್ರ ಉಸಿರಾಟದ ತೊಂದರೆ (ಎಸ್‌‌‌ಎಆರ್‌ಐ) ಯಿಂದ ಜೂನ್‌‌ 12 ರಂದು ಮಂಗಳೂರಿನ ಕೊರೊನಾ ಆಸ್ಪತ್ರೆಗೆ ದಾಖಲಾಗಿದ್ದರು. ಮಧುಮೇಹ ಹಾಗೂ ನ್ಯೂಮೋನಿಯಾದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 8 ಮಂದಿ ಕೊರೋನಾಕ್ಕೆ ಬಲಿ:

ಬೆಂಗಳೂರು ನಗರ ಜಿಲ್ಲೆಯಲ್ಲಿ ಆರು, ಬಳ್ಳಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 150ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 9,721 ಕೊರೋನ ಸೋಂಕಿತರ ಪೈಕಿ 6,004 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 274 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 150 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,563 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.