ಆರೋಗ್ಯ

ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ 10 ದಿನ ಮಾತ್ರ ಅವಕಾಶ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

Pinterest LinkedIn Tumblr

ಬೆಂಗಳೂರು: ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗಳನ್ನು ಹೊತ್ತಿಸಲು ಅವಕಾಶ ನೀಡಿದ ನಂತರ ಪಟಾಕಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

(ಸಾಂದರ್ಭಿಕ ಚಿತ್ರ)

ಕೋವಿಡ್-19 ಶಿಷ್ಟಾಚಾರದ ಹಿನ್ನೆಲೆ ಈ ಬಾರಿ ನವೆಂಬರ್ 7ರಿಂದ 16ರವರೆಗೆ ಮಾತ್ರ ಪಟಾಕಿಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರದ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ್ ಭಾಸ್ಕರ್ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಆಯಾಯ ಎಸ್ಪಿಗಳು, ಬೆಂಗಳೂರು ಸಿಟಿ ಪೊಲೀಸ್ ಆಯುಕ್ತರು, ಬಿಬಿಎಂಪಿಗಳಿಗೆ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

ಏನೇನು ನಿಯಮಾವಳಿ….
ಪಟಾಕಿಗಳ ಮಾರಾಟವನ್ನು 17 ದಿನಗಳಿಂದ 10 ದಿನಗಳಿಗೆ ಇಳಿಸಿರುವ ರಾಜ್ಯ ಸರ್ಕಾರ, ಅಂಗಡಿಗಳಿಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ಕೊಟ್ಟಿದೆ. ಪಟಾಕಿ ಮಾರಾಟಗಾರರು ಮಾರಾಟ ಮಾಡುವ ಸ್ಥಳದಲ್ಲಿ ಸಾಕಷ್ಟು ಗಾಳಿ ಬೆಳಕು ಹೊಂದಿರಬೇಕು, ಅಂಗಡಿಯನ್ನು ಪ್ರತಿದಿನ ಸ್ಯಾನಿಟೈಸ್ ಮಾಡುತ್ತಿರಬೇಕು, ಥರ್ಮಲ್ ಸ್ಕ್ರೀನಿಂಗ್ ಮತ್ತು ಗ್ರಾಹಕರಿಗೆ ಕೈಯನ್ನು ಸ್ಯಾನಿಟೈಸ್ ಮಾಡಿಕೊಳ್ಳುವ ವ್ಯವಸ್ಥೆ ಇಟ್ಟಿರಬೇಕು. ಮಾರಾಟಗಾರರು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪಟಾಕಿ ಮಾರುವ ಅಂಗಡಿಗಳ ಮಧ್ಯೆ ಕನಿಷ್ಠ 6 ಮೀಟರ್ ಅಂತರವಿರಬೇಕು.

ತಂತ್ರಜ್ಞಾನ ಕ್ರಮಗಳ ಬಳಕೆ…
ಪಟಾಕಿ ಹಚ್ಚುವ ಸಮಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ, ಜನರು ಸುರಕ್ಷತೆ ಪಾಲಿಸುವುದು ಕಡಿಮೆಯಾಗಬಹುದು ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಸ್ತೃತ ವರದಿಯನ್ನು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಪರವಾನಗಿ ನೀಡುವ ಅಧಿಕಾರಿಗಳು ಮತ್ತು ಗ್ರಾಹಕರು ಅನುಮೋದನೆ ಪಡೆದ ಪಟಾಕಿಗಳನ್ನು ಖಚಿತಪಡಿಸಿಕೊಳ್ಳಲು ಈ ವರ್ಷ ತಂತ್ರಜ್ಞಾನ-ನೆರವಿನ ಕ್ರಮಗಳನ್ನು ಪರಿಚಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.