ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್-19 ಲಸಿಕಾ ಉದ್ಘಾಟನಾ ಕಾರ್ಯಕ್ರಮವು ಶನಿವಾರ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು.
ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 6 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಿದ್ದು, 5 ಕೇಂದ್ರಗಳಲ್ಲಿ 100 ಮಂದಿಗೆ ಮತ್ತು 1 ಪಿ.ಹೆಚ್.ಸಿ.ಯಲ್ಲಿ 38 ಮಂದಿಗೆ ಸೇರಿದಂತೆ ಒಟ್ಟು 538 ಮಂದಿಗೆ ಲಸಿಕೆ ನೀಡಲಾಗುವುದು. ಜಿಲ್ಲೆಯಲ್ಲಿ ಮೊದಲ ಹಂತದ ಲಸಿಕೆ ಪಡೆಯಲು 22,333 ಮಂದಿ ನೊಂದಣಿಯಾಗಿದ್ದು, ಜಿಲ್ಲೆಗೆ 12000 ಲಸಿಕೆ ಬಂದಿದೆ. ಒಟ್ಟು ಜಿಲ್ಲೆಯಲ್ಲಿ 258 ಶಿಬಿರಗಳನ್ನು ಆಯೋಜಿಸಿ ಲಸಿಕೆ ನೀಡಲು ಮೈಕ್ರೋ ಪ್ಲಾನಿಂಗ್ ತಯಾರಿಸಲಾಗಿದೆ. 139 ಮಂದಿ ಲಸಿಕೆ ನೀಡುವವರಿಗೆ ತರಬೇತಿ ನೀಡಿದೆ, ಜನವರಿ 20 ರೊಳಗೆ 2 ನೇ ಹಂತದ ಪಟ್ಟಿ ತಯಾರಿಸಿ, ಕೇಂದ್ರಕ್ಕೆ ಸಲ್ಲಿಸಲಾಗುವುದು. ಜಿಲ್ಲೆಗೆ ಹಂತಹಂತವಾಗಿ ಲಸಿಕೆ ಬರಲಿದ್ದು, ನೊಂದಣಿ ಮಾಡಿದ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಶಾಸಕ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಡಿಹೆಚ್‌ಓ ಡಾ.ಸುದೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಕೋವಿಡ್ ವಿಶೇಷಾಧಿಕಾರಿ ಡಾ.ಪ್ರೇಮಾನಂದ, ಕೋವಿಡ್ ಲಸಿಕಾ ಅಧಿಕಾರಿ ಡಾ.ಎಂ.ಜಿ.ರಾಮ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ತಾ.ಪಂ. ಅಧ್ಯಕ್ಷೆ ಸಂಧ್ಯಾ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಡಿ ಗ್ರೂಪ್ ಸಿಬ್ಬಂದಿ ಮೊದಲು ಮತ್ತು ದ್ವಿತೀಯರಾಗಿ ಲಸಿಕೆ ಪಡೆದರು. ನಂತರದಲ್ಲಿ ಜಿಲ್ಲಾ ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಕೋವಿಡ್ ಲಸಿಕಾ ಅಧಿಕಾರಿ ಡಾ.ಎಂ.ಜಿ.ರಾಮ ಲಸಿಕೆ ಪಡೆದರು.