ಬೆಳಗಾವಿ, ಡಿ.9: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗಾಢ ನಿದ್ದೆಯಲ್ಲಿದ್ದು, ರೈತರ ಸಮಸ್ಯೆ ಗಳ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸುವರ್ಣ ವಿಧಾನಸೌಧದ ಎದುರು ಆಯೋಜಿಸಿದ್ದ ಬೃಹತ್ ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಬ್ಬುಬೆಳೆಗಾರರಿಗೆ ಬಾಕಿ ಹಣ ಪಾವತಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಸರಕಾರ ಕೂಡಲೆ ಪ್ರತಿಟನ್ ಕಬ್ಬಿಗೆ 2,500 ರೂ. ಬೆಂಬಲ ಬೆಲೆ ಘೋಷಣೆ ಮಾಡಿ ಕಬ್ಬು ಖರೀದಿಸಬೇಕು. ಅಲ್ಲದೆ, ರೈತರ ಹಿತ ಕಾಪಾಡಲು ಭತ್ತ, ಶೇಂಗಾ, ಮೆಕ್ಕೆಜೋಳ, ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ಖರೀದಿಸಲು ಖರೀದಿ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಿದರು.
ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅನಾವೃಷ್ಟಿ ಹಾಗೂ ಅತಿವೃಷ್ಟಿ ಸಂಭವಿಸಿ ರೈತರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಧಾವಿಸಬೇಕಿದ್ದ ಸರಕಾರ ಆಂತರಿಕ ಕಚ್ಚಾಟದಲ್ಲಿ ತಲ್ಲೀನವಾಗಿದೆ. ಮುಖ್ಯಮಂತ್ರಿ ಹಾಗೂ ಸಚಿವರ ನಡುವಿನ ಹೊಂದಾಣಿಕೆಯ ಕೊರತೆ ಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಅವರು ಕಿಡಿಗಾರಿದರು.
ಭ್ರಷ್ಟಾಚಾರದ ಆರೋಪವನ್ನು ಎದುರಿಸು ತ್ತಿರುವ ಕಳಂಕಿತ ಸಚಿವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೆ ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಮಾತನಾಡಿ, ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡುವ ವಾಗ್ದಾನ ದೊಂದಿಗೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಐದು ಮಂದಿ ಸಚಿವರ ವಿರುದ್ಧ ಭ್ರಷ್ಟಚಾರದ ಆರೋಪಗಳು ಕೇಳಿ ಬಂದಿವೆ. ಆದರೂ, ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಭ್ರಷ್ಟ ಸಚಿವರ ರಕ್ಷಣೆಗೆ ನಿಂತಿದ್ದಾರೆ ಎಂದು ಅವರು ದೂರಿದರು.
ಶಾಂತ ರೀತಿಯಲ್ಲಿ, ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಲು ಮುಂದಾದರೂ ಪೊಲೀಸರನ್ನು ಮುಂದಿಟ್ಟುಕೊಂಡು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು.
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕಳೆದ ಒಂದೂವರೆ ವರ್ಷಗಳಿಂದ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಪ್ರತಿದಿನ ಅತ್ಯಾಚಾರ ಕೊಲೆ, ಸುಲಿಗೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಗೃಹ ಸಚಿವರಿಗೆ ಪೊಲೀಸ್ ಅಧಿಕಾರಿಗಳ ಮೇಲೆ ಹಿಡಿತವಿಲ್ಲ. ರೈತರು ಆತ್ಮಹತ್ಯೆಗಳನ್ನು ಮಾಡಿಕೊಳ್ಳುತ್ತಿದ್ದರು. ಸರಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ಶಕ್ತಿ ಪ್ರದರ್ಶನ ಮಾಡಲೆಂದೇ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ದಾವಣಗೆರೆ, ಶಿವಮೊಗ್ಗ, ಕೊಪ್ಪಳ ಸೇರಿದಂತೆ ಈ ಭಾಗದ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮುಖಂಡರಾದ ಕೆ.ಎಸ್.ಈಶ್ವರಪ್ಪ, ಸುರೇಶ್ ಅಂಗಡಿ, ಶಿವಕುಮಾರ್ ಉದಾಸಿ, ಶ್ರೀರಾಮುಲು, ಕರಡಿ ಸಂಗಣ್ಣ, ಆರ್.ಅಶೋಕ್, ಸೋಮಣ್ಣ, ಬಸವರಾಜ ಬೊಮ್ಮಯಿ, ಸಿ.ಟಿ.ರವಿ, ಅರವಿಂದ ಲಿಂಬಾವಳಿ, ಲಕ್ಷಣ್ ಸವದಿ, ಉಮೇಶ್ ಕತ್ತಿ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನ ಸಭೆಯಲ್ಲಿ ಭಾಗವಹಿಸಿದ್ದರು.