ಬೆಂಗಳೂರು: ರಸ್ತೆ ಸಾರಿಗೆ ನಿಗಮಗಳ ನೌಕರರು, ಅಧಿಕಾರಿಗಳ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಮಧ್ಯ ರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರ್ಯಾಯ ವ್ಯವಸ್ಥೆಗೆ ಮುಂದಾಗಿದ್ದು ಬಸ್, ಮ್ಯಾಕ್ಸಿಕ್ಯಾಬ್ ಸೇರಿದಂತೆ ಖಾಸಗಿ ವಾಹನಗಳನ್ನು ಬಳಸಲು ನಿರ್ಧರಿಸಿದೆ.
ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳ ಅಧಿಕಾರಿ ಮತ್ತು ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳನ್ನು ಬಳಸುವ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು , ಮುಷ್ಕರದಿಂದಾಗುವ ತೊಂದರೆ ನಿವಾರಣೆಗೆ ಖಾಸಗಿ ವಾಹನಗಳನ್ನು ಬಳಸಲು ನಿರ್ಧಾರ ಮಾಡಲಾಗಿದೆ.
ಈ ಸಂಜೆಯೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಶೇ.30ರಷ್ಟು ವೇತನ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿರುವುದು ಅವೈಜ್ಞಾನಿಕ. ಅಷ್ಟು ಪ್ರಮಾಣದಲ್ಲಿ ವೇತನ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಕನಿಷ್ಠ 4ರಿಂದ 5 ಸಾವಿರ ಕೋಟಿ ರೂ. ಹೊರೆಯಾಗಲಿದೆ ಎಂದರು. ಇಷ್ಟು ಪ್ರಮಾಣದ ಆರ್ಥಿಕ ಹೊರೆಯನ್ನು ಭರಿಸುವ ಶಕ್ತಿ ಸಾರಿಗೆ ನಿಗಮಗಳಿಗೆ ಇಲ್ಲ . ಶೇ.8ರಿಂದ ಶೇ.10ಕ್ಕೆ ವೇತನ ಹೆಚ್ಚಳ ಮಾಡಲು ತೀರ್ಮಾನಿಸಿದ್ದರೂ ಕಾರ್ಮಿಕ ಸಂಘಟನೆಗಳು ಒಪ್ಪದೆ ಮುಷ್ಕರಕ್ಕೆ ಕರೆ ನೀಡಿವೆ. ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ಕೈಬಿಡಬೇಕು ಎಂದು ಪದೆ ಪದೇ ಮನವಿ ಮಾಡಲಾಗುತ್ತಿದೆ.
ಕಳೆದ ನಾಲ್ಕು ವರ್ಷಗಳ ಹಿಂದೆಯೂ ಕೂಡ ಇದೇ ರೀತಿ ಎರಡು ದಿನಗಳ ಕಾಲ ಮುಷ್ಕರ ನಡೆಸಲಾಗಿತ್ತು. ಆ ಸಂದರ್ಭದಲ್ಲೂ ಕೂಡ ಖಾಸಗಿ ವಾಹನಗಳನ್ನು ಪರ್ಯಾಯವಾಗಿ ಬಳಕೆ ಮಾಡಿ ಪರಿಸ್ಥಿತಿ ನಿಭಾಯಿಸಲಾಯಿತು. ಅದೇ ರೀತಿ ಈಗಲೂ ಕೂಡ ಖಾಸಗಿ ಬಸ್, ಮ್ಯಾಕ್ಸಿ ಕ್ಯಾಬ್ ಸೇರಿದಂತೆ ಇತರೆ ವಾಹನಗಳನ್ನು ಪ್ರಯಾಣಿಕರಿಗೆ ಒದಗಿಸಲಾಗುವುದು. ಆದರೂ ಪ್ರಯಾಣಿಕರಿಗೆ ಆಗುವ ತೊಂದರೆಯನ್ನು ಪೂರ್ಣ ಪ್ರಮಾಣದಲ್ಲಿ ತಪ್ಪಿಸಲಾಗುವುದಿಲ್ಲ ಎಂಬ ಅರಿವಿದೆ ಎಂದು ಹೇಳಿದರು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಕೊನೆ ಘಳಿಗೆಯಲ್ಲಿ ಕಾರ್ಮಿಕ ಸಂಘಟನೆಗಳು ಮುಷ್ಕರ ಕೈಬಿಟ್ಟರೆ ಬಿಕ್ಕಟ್ಟು ಬಗೆಹರಿಯಲಿವೆ. ಎಸ್ಮಾ ಜಾರಿ ಮಾಡಿ ಮುಷ್ಕರವನ್ನು ಹತ್ತಿಕ್ಕುವ ಆಲೋಚನೆಯನ್ನೂ ಕೂಡ ಮಾಡಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗ ಅವಲೋಕಿಸುತ್ತಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಪ್ರಯಾಣಿಕರಿಗಾಗಿ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಿದೆ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.
Comments are closed.