ಬೆಂಗಳೂರು: ಮಹದಾಯಿ ಹೋರಾಟ ಸಂದರ್ಭದಲ್ಲಿ ಬಂಧಿತರಾದ ರೈತರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ಹಿಂಪಡೆಯಲು ಇಂದಿಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡದವರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ಹೊರತುಪಡಿಸಿ ಉಳಿದ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.
ಹೋರಾಟದ ವೇಳೆ ರೈತರ ಮೇಲೆ ದಾಖಲಿಸಿರುವ ಮೊಕದ್ದಮೆಗಳ ಪರಾಮರ್ಶೆಗೆ ಸಂಬಂಧಿಸಿದಂತೆ ನೇಮಿಸಲಾಗಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಔರಾದಕರ್ ನೀಡಿರುವ ವರದಿಯನ್ನಾಧರಿಸಿ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ಅಮಾಯಕ ರೈತರ ಮೇಲೆ ದಾಖಲಿಸಿರುವ ಮೊಕದ್ದಮೆಗಳನ್ನು ಹಿಂಪಡೆಯುವ ಸಂಬಂಧ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
ಸಾರ್ವಜನಿಕರ ಆಸ್ತಿಪಾಸ್ತಿಗೆ ಮತ್ತು ಸರ್ಕಾರದ ಆಸ್ತಿಗೆ ಹಾನಿ ಮಾಡಿದವರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳ ವಿಚಾರಣೆ ಮುಂದುವರೆಸಲು ಸಂಪುಟ ಒಪ್ಪಿಗೆ ನೀಡಿದೆ.
ಯಮನೂರಿನಲ್ಲಿ ರೈತರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಕುರಿತಂತೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಈ ಘಟನೆಯಲ್ಲೂ ಅಮಾಯಕರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ.
Comments are closed.