ಕರ್ನಾಟಕ

ಆರ್ ಎಸ್ ಎಸ್ ಕಾರ್ಯಕರ್ತನ ಕೊಲೆ ಹಿನ್ನೆಲೆ; ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ: ಶಿವಾಜಿನಗರದಲ್ಲಿ ಉದ್ವಿಗ್ನ ಸ್ಥಿತಿ

Pinterest LinkedIn Tumblr

bjp

ಬೆಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಿಂದಾಗಿ ಬೆಂಗಳೂರಿನ ಶಿವಾಜಿನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಬಿಜೆಪಿ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಸುತ್ತಮುತ್ತಲ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ರುದ್ರೇಶ್ ಹತ್ಯೆ ಖಂಡಿಸಿ ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದಿದ್ದು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರುದ್ರೇಶ್ ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಇನ್ನು ಶಿವಾಜಿನಗರದ ಸುತ್ತಮುತ್ತಲಿನ ಪ್ರದೇಶ ಬೂದಿ ಮುಚ್ಚಿದ ಕೆಂಡದಂತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿ ನಗರ, ಫ್ರೇಜರ್ ಟೌನ್, ಭಾರತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಅಂತೆಯೇ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ನೇತೃತ್ವದಲ್ಲಿ ಶಿವಾಜಿನಗರದ ಸುತ್ತಮುತ್ತಲ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಘಟನೆ ನಡೆದಿರುವುದರಿಂದ ಪೊಲೀಸರಿಂದ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ. ಸ್ಥಳದಲ್ಲಿ ಕೆ ಎಸ್ ಆರ್ ಪಿ ತುಕಡಿ, ಕ್ಷಿಪ್ರ ಕಾರ್ಯಪಡೆಗಳನ್ನು ನಿಯೋಜಿಸಲಾಗಿದೆ.

ರುದ್ರೇಶ್ ಕೊಲೆಯನ್ನು ಖಂಡಿಸಿ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಬಿಜೆಪಿ ಮುಖಂಡ ಆರ್ ಅಶೋಕ್ ನೇತೃತ್ವದಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದು, ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ.

ಇನ್ನು ರುದ್ರೇಶ್ ಕೊಲೆ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಬಂಧನಕ್ಕೆ 5 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಭರವಸೆ ನೀಡಿದ್ದಾರೆ.

ಆರ್‍ಎಸ್‍ಎಸ್ ಕಾರ್ಯಕರ್ತರು ನವರಾತ್ರಿ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಹಲಸೂರು, ಕಾಕ್ಸ್‍ಟೌನ್, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತೀನಗರ ಸುತ್ತಮುತ್ತಲ ರಸ್ತೆಗಳಲ್ಲಿ ಪಥಸಂಚಲನ ಮಾಡಿದ್ದರು. ಪಂಥಸಂಚಲನ ಮುಗಿದ ಬಳಿಕ ಬೆಳಗ್ಗೆ 11.30ರ ಸುಮಾರಿಗೆ ರುದ್ರೇಶ್ ಅವರು ಸ್ನೇಹಿತರಾದ ಜಯರಾಂ, ಕುಮಾರ್ ಹಾಗೂ ಹರೀಶ್ ಅವರ ಜತೆ ಕಾಮರಾಜ ರಸ್ತೆಯ ಬಿಇಒ ಕಚೇರಿ ಬಳಿ ಮಾತನಾಡುತ್ತ ನಿಂತಿದ್ದಾಗ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರುದ್ರೇಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ರುದ್ರೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Comments are closed.