ಕರ್ನಾಟಕ

ರುದ್ರೇಶ್ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ

Pinterest LinkedIn Tumblr

SRI.B.S. YEDIYURAPPA ,BJP PRESIDENT,KARNATAKA & 28 MEMBERS MEETS.  Shri Vajubhai Vala, Governor of Karnataka  at Rajbhavan Bengaluru.

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಕೊಲೆ, ಸುಲಿಗೆ, ಅಪರಾಧ ಪ್ರಕರಣಗಳು ಅವ್ಯಾಹತವಾಗಿ ನಡೆದು ಜನ ಬೆಚ್ಚಿಬೀಳುವಂತಾಗಿದೆ ಎಂದು ರಾಜ್ಯಪಾಲರಿಗೆ ದೂರು ನೀಡಿರುವ ರಾಜ್ಯ ಬಿಜೆಪಿ ನಾಯಕರು ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ನೇತೃತ್ವದ ಬಿಜೆಪಿ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ನಡೆದಿರುವ ಆರ್ಎಸ್ಎಸ್ ಕಾರ್ಯಕರ್ತನ ಕೊಲೆ ಪ್ರಕರಣಗಳನ್ನು ರಾಜ್ಯಪಾಲರ ಗಮನಕ್ಕೆ ತಂದು ರಾಜ್ಯ ಸರ್ಕಾರ ಈ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ತನಿಖೆಯು ಸರಿಯಾದ ದಿಕ್ಕಿನಲ್ಲಿ ಸಾಗಿಲ್ಲ ಎಂಬುದರ ಬಗ್ಗೆ ವಿವರ ಮಾಹಿತಿ ನೀಡಿತು.

ಆರ್‌ಎಸ್ಎಸ್ ಕಾರ್ಯಕರ್ತರ ಕೊಲೆ ಹಿಂದೆ ಜಿಹಾದಿ ಹಾಗೂ ಮಾರ್ಕ್ಸಿಸ್ಟರ ಅಪವಿತ್ರ ಮೈತ್ರಿ ಇದೆ ಎಂಬ ಅನುಮಾನವನ್ನು ಬಿಜೆಪಿ ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿಯಲ್ಲಿ ವ್ಯಕ್ತಪಡಿಸಿದೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಮತಬ್ಯಾಂಕ್ ರಾಜಕಾರಣಕ್ಕಾಗಿ ಈ ಕೊಲೆ ಪ್ರಕರಣದ ಬಗ್ಗೆ ತನಿಖೆಗೆ ಹೆಚ್ಚಿನ ಆಸಕ್ತಿ ವಹಿಸುತ್ತಿಲ್ಲ. ಹಾಗೆಯೇ ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ಕೊಡುವಂತೆ ಬಿಜೆಪಿ ಮುಖಂಡರು ರಾಜ್ಯಪಾಲರಿಗೆ ಮನವಿ ಮಾಡಿದರು.

ಯಡಿಯೂರಪ್ಪ ವಾಗ್ದಾಳಿ
ರಾಜ್ಯಪಾಲರ ಭೇಟಿ ನಂತರ ರಾಜಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿರುವ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದೇವೆ. ಆರ್ಎಸ್ಎಸ್ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಕಾಂಗ್ರೆಸ್ ಸರ್ಕಾರ ಕೊಲೆಗಡುಕ ಸರ್ಕಾರ ಎಂದು ಹರಿಹಾಯ್ದರು.

ಶಿವಾಜಿನಗರದಲ್ಲಿ ನಡೆದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ಇದುವರೆಗೂ ಸಾಧ್ಯವಾಗಿಲ್ಲ. ಇವರಿಗೆ ತನಿಖೆ ನಡೆಸುವ ಯೋಗ್ಯತೆ ಇಲ್ಲ ಎಂದರೆ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಿ ಎಂದು ಒತ್ತಾಯಿಸಿದರು.

ಶೆಟ್ಟರ್ ಒತ್ತಾಯ
ಆರ್ಎಸ್ಎಸ್ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಕೆಲ ಮತೀಯ ಸಂಘಟನೆಗಳ ಕೈವಾಡ ಇರುವ ಅನುಮಾನ ವ್ಯಕ್ತವಾಗಿದ್ದು,. ಕೋಮು- ಸೌಹಾರ್ಧಕ್ಕೆ ಧಕ್ಕೆ ತರಲು ಮತೀಯ ಸಂಘಟನೆಗಳು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿವೆ. ರುದ್ರೇಶ್ ಕೊಲೆ ಪ್ರಕರಣದಲ್ಲೂ ಮತೀಯ ಶಕ್ತಿಗಳ ಕೈವಾಡ ಇದ್ದು, ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಂಸದ ಪಿ.ಸಿ. ಮೋಹನ್, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಶಾಸಕರುಗಳಾದ ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ಅರವಿಂದ ಲಿಂಬಾವಳಿ, ಎಸ್.ಆರ್. ವಿಶ್ವನಾಥ್, ಬಿ.ಎನ್. ವಿಜಯ ಕುಮಾರ್, ನಾರಾಯಣಸ್ವಾಮಿ, ಮುನಿರಾಜು, ವಿಮಲಗೌಡ ಮತ್ತಿತರರು ಉಪಸ್ಥಿತರಿದ್ದರು.

Comments are closed.