ಕರ್ನಾಟಕ

ಎಸ್ ಎಂ ಕೃಷ್ಣ ಶೀಘ್ರ ಬಿಜೆಪಿ ಸೇರಲಿದ್ದಾರೆ ಎಂದ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂಕೃಷ್ಣ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕಲಬುರಗಿಯಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಇತ್ತೀಚೆಗಷ್ಟೇ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಎಸ್ ಎಂ ಕೃಷ್ಣ ಅವರು ಕೂಡ ಬಿಜೆಪಿ ಸೇರ್ಪಡೆಗೆ ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ.

“ಎಸ್ ಎಂ ಕೃಷ್ಣ ಅವರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದ್ದರಿಂದ ಕಾಂಗ್ರೆಸ್ ತೊರೆದಿರುವದಾಗಿ ಹೇಳಿದ್ದಾರೆ. ಅಂತೆಯೇ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಪಾರ ಗೌರವವಿದ್ದು, ಇತ್ತೀಚೆಗಷ್ಟೇ ಅಂದರೆ ನೋಟು ನಿಷೇಧವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಚರ್ಚೆ ನಡೆಸಿದ್ದರು. ಪ್ರಧಾನಿ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲಿದೆ ಎಂದು ಕೃಷ್ಣಾ ನಂಬಿದ್ದಾರೆ. ಹೀಗಾಗಿ ಅವರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ. ಈಗಾಗಲೇ ಈ ಬಗ್ಗೆ ಮಾತುಕತೆ ನಡೆಸಿದ್ದು, ಮತ್ತೊಮ್ಮೆ ಚರ್ಚೆ ನಡೆಸಿ ಈ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಆ ಮೂಲಕ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಬಿಜೆಪಿ ಸೇರ್ಪಡೆಯನ್ನು ಬಿಎಸ್ ವೈ ಖಚಿತ ಪಡಿಸಿದ್ದು, ಬಿಜೆಪಿ ಪ್ರಾಬಲ್ಯವಿಲ್ಲದ ಭಾಗದಲ್ಲೂ ಪ್ರಾಬಲ್ಯ ಸಾಧಿಸಲು ಬಿಎಸ್ ವೈ ಯತ್ನಿಸಿದ್ದಾರೆ.

Comments are closed.